More

    ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸಲಿ; ಸೇವೆ ಕಾಯಂಗೊಳಿಸಲು ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

    ಹಾವೇರಿ: ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ರಾಜ್ಯದಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಹಿನ್ನೆಲೆಯಲ್ಲಿ ಸರ್ಕಾರಿ ಪದವಿ ಕಾಲೇಜುಗಳು ಹಿತರಕ್ಷಣಾ ಸಮಿತಿ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ತರಗತಿ ಬಹಿಷ್ಕರಿಸಿದ ಅತಿಥಿ ಉಪನ್ಯಾಸಕರು ನಗರದ ಮುನ್ಸಿಪಲ್ ಮೈದಾನದಿಂದ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಿದ್ದಪ್ಪ ವೃತ್ತದಲ್ಲಿ ಕೆಲಕಾಲ ಪ್ರತಿಭಟಿಸಿದರು. ತಹಸೀಲ್ದಾರ್ ಶಂಕರ ಜಿ.ಎಸ್. ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ರವಾನಿಸಿದರು. ಸುಮಾರು 20, 30 ವರ್ಷಗಳ ಬೇಡಿಕೆಯನ್ನು ಈಡೇರಿಸುವಂತೆ ನ.23ರಿಂದ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿವರೆಗೂ ಪ್ರತಿಭಟನೆ ಆರಂಭಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಈ ಹಿಂದೆ ವಿರೋಧ ಪಕ್ಷದ ಸ್ಥಾನದಲ್ಲಿದ್ದಾಗ ಅತಿಥಿ ಉಪನ್ಯಾಸಕರ ಸಮಸ್ಯೆ ಕುರಿತು ಸದನದಲ್ಲಿ ಧ್ವನಿ ಎತ್ತಿದ್ದರು. ನಮ್ಮ ಸರ್ಕಾರ ಆಡಳಿತಕ್ಕೆ ಬಂದರೆ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲಾಗುವುದು ಎಂದು ಭರವಸೆ ನೀಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲೂ ಅತಿಥಿ ಉಪನ್ಯಾಸಕರನ್ನು ಸೇವೆ ಕಾಯಂಗೊಳಿಸುವ ಭರವಸೆ ನೀಡಿತ್ತು. ಅದರಂತೆ ಈಗ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಿದ್ದು, ನುಡಿದಂತೆ ನಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
    ಸಂಘದ ಜಿಲ್ಲಾಧ್ಯಕ್ಷ ಡಾ.ಪ್ರಶಾಂತಕುಮಾರ ಬೆನ್ನೂರ ಮಾತನಾಡಿ, ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಬಹುತೇಕವಾಗಿ ಅತಿಥಿ ಉಪನ್ಯಾಸಕರ ಕರ್ತವ್ಯಗಳನ್ನು ಅವಲಂಬಿಸಿವೆ. ಸುಮಾರು ವರ್ಷಗಳಿಂದ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತ ಬಂದಿರುವ ಅತಿಥಿ ಉಪನ್ಯಾಸಕರ ಬದುಕು ಅತಂತ್ರವಾಗಿದೆ. ಅತಿಥಿ ಎಂಬ ಅನಿಷ್ಟ ಪದ್ದತಿ ಅಂತ್ಯಗೊಳಿಸಿ ಸೇವಾ ಕಾಯಂಗೊಳಿಸಬೇಕು. ವಿಧಾನ ಪರಿಷತ್ ಸಭಾಪತಿ ಹಾಗೂ ಸದಸ್ಯರು ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಚರ್ಚಿಸಿ ಕಾಯಂಮಾತಿ ನೀಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.
    ಪ್ರತಿಭಟನೆಯಲ್ಲಿ ಡಾ.ಸುರೇಶ ವಾಲ್ಮೀಕಿ, ಡಾ.ಆಶಾ ಗುಡಿ, ಮಂಜುನಾಥ ಈಳಗೇರ, ಶಂಭುಲಿಂಗ ದೇವಸೂರ, ರಮೇಶ ನಾಯ್ಕ, ಕಾಂತೇಶ ರೆಡ್ಡಿ, ಶಿವಶಂಕ್ರಯ್ಯ ಕೂಡಲಮಠ, ಮಲ್ಲಿಕಾರ್ಜುನ ಕನ್ನೇಶ್ವರ, ಸಿ.ಕೆ.ಪಾಟೀಲ, ವಿ.ಎಸ್.ಗುಡಗೇರಿ, ಉಮಾ ತಿಪ್ಪನಗೌಡ್ರ, ನಾಗರಾಜ ಮುಚ್ಚಟ್ಟಿ, ಪ್ರಕಾಶ ಭೀಮರಾಯ, ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts