More

    ಕೆಇಎ ಪರೀಕ್ಷೆಗೆ ಡ್ರೆಸ್ ಕೋಡ್ ಕಡ್ಡಾಯ; ಅಕ್ರಮ ಜರುಗದಂತೆ ಪಾರದರ್ಶಕವಾಗಿ ಆಯೋಜಿಸಿ; ಅಧಿಕಾರಿಗಳಿಗೆ ಡಿಸಿ ರಘುನಂದನ ಮೂರ್ತಿ ಸೂಚನೆ

    ಹಾವೇರಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವಿವಿಧ ಇಲಾಖೆ ಹಾಗೂ ಸಂಸ್ಥೆಗಳಲ್ಲಿ ಖಾಲಿರುವ ಗ್ರೂಪ್ ಬಿ ಮತ್ತು ಸಿ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ನೇಮಕಾತಿಗಾಗಿ ನ.19ರಂದು ಜಿಲ್ಲೆಯ 21 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ. ಪರೀಕ್ಷೆಗೆ ಡ್ರೆಸ್ ಕೋಡ್ ಕಡ್ಡಾಯವಿದ್ದು, ಅಕ್ರಮ ನಡೆಯದಂತೆ ಪಾರದರ್ಶಕವಾಗಿ ಮಾರ್ಗಸೂಚಿ ಅನುಸಾರ ಪರೀಕ್ಷೆ ನಡೆಸಿ ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬೇಡಿ. ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು, ಶಿಕ್ಷಕರು ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಬಿಗಿ ಪೊಲೀಸ್ ಬಂದೋಬ್ತಸ್ ವ್ಯವಸ್ಥೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
    ಪರೀಕ್ಷಾ ಪ್ರಾಧಿಕಾರ ನಿಗದಿಪಡಿಸಿದ ಡ್ರೆಸ್ ಕೋಡ್‌ಅನ್ನು ಪ್ರತಿಯೊಬ್ಬ ಅಭ್ಯರ್ಥಿಯು ಕಡ್ಡಾಯವಾಗಿ ಪಾಲಿಸಬೇಕು. ಡ್ರೆಸ್ ಕೋಡ್ ನಿಯಮ ಪಾಲಿಸಿದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನೀಡುವುದಿಲ್ಲ. ಉದ್ದ ತೋಳಿನ ಉಡುಪು, ಜೀನ್ಸ್ ಧರಿಸಿ ಬರುವಂತಿಲ್ಲ. ಮಂಗಳಸೂತ್ರ ಮತ್ತು ಮೂಗುತಿ ಹೊರತುಪಡಿಸಿ ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ. ಈ ಸೂಚನೆಗಳನ್ನು ಪರೀಕ್ಷಾ ಪ್ರವೇಶ ಪತ್ರಗಳಲ್ಲಿ ನೀಡಲಾಗಿದೆ ಎಂದು ತಿಳಿಸಿದರು.
    ತ್ರಿಸದಸ್ಯ ಸಮಿತಿ ಪರೀಕ್ಷೆ ಮುನ್ನಾ ದಿನ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಬೇಕು. ಈವರೆಗೆ ಜಿಲ್ಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಸುಗಮವಾಗಿ ಜರುಗಿದ್ದು, ಮುಂದೆಯೂ ಸಹ ಪರೀಕ್ಷೆಗಳನ್ನು ಅತ್ಯಂತ ಜಾಗರೂಕತೆಯಿಂದ ಜವಾಬ್ದಾರಿಯಿಂದ ನಡೆಸುವ ಮೂಲಕ ಜಿಲ್ಲೆಗೆ ಕಪ್ಪು ಚುಕ್ಕೆ ಬರದಂತೆ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
    ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಉಮೇಶಪ್ಪ ಮಾತನಾಡಿ, ಬೆಳಗಿನ ಅವಧಿಗೆ 6,751 ಹಾಗೂ ಮಧ್ಯಾಹ್ನ ಅವಧಿಗೆ 6,415 ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದಾರೆ. ಖಜಾನೆಯಿಂದ ಪ್ರಶ್ನೆಪತ್ರಿಕೆ ಕೊಂಡೊಯ್ಯಲು ತ್ರಿಸದಸ್ಯರ ಸಮಿತಿ ರಚಿಸಲಾಗಿದೆ. ಮಾರ್ಗಾಧಿಕಾರಿಗಳ ಉಸ್ತುವಾರಿಯಲ್ಲಿ ಪ್ರಶ್ನೆಪತ್ರಿಕೆ ಬಂಡಲ್‌ಗಳನ್ನು ಪೊಲೀಸ್ ಬೆಂಗಾವಲಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ರವಾನಿಸಲಾಗುವುದು ಎಂದರು.

    ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ, ಉಪವಿಭಾಗಾಧಿಕಾರಿ ಚನ್ನಪ್ಪ, ಹಾವೇರಿ ತಹಶೀಲ್ದಾರ್ ಶಂಕರ ಜಿ.ಎಸ್., ವಿವಿಧ ತಾಲೂಕುಗಳ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಶು ಅಭಿವೃದ್ಧಿ ಅಧಿಕಾರಿಗಳು, ಇತರ ಇಲಾಖೆಗಳ ಅಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಾಚಾರ್ಯರು ಉಪಸ್ಥಿತರಿದ್ದರು.

    ಸಿಸಿ ಟಿವಿ ಕಡ್ಡಾಯ :
    ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಹಾಗೂ ಗಡಿಯಾರ ಅಳವಡಿಕೆ ಕಡ್ಡಾಯವಾಗಿದೆ. ಪರೀಕ್ಷಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಪೀಠೋಪಕರಣ ಸೇರಿ ಮೂಲ ಸೌಕರ್ಯ ಒದಗಿಸಬೇಕು.
    ಇಲೆಕ್ಟ್ರಾನಿಕ್ ಉಪಕರಣಗಳ ನಿಷೇಧ:
    ಪರೀಕ್ಷಾ ಕೇಂದ್ರಗಳಲ್ಲಿ ಅತ್ಯಾಧುನಿಕ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಪೇಜರ್, ವೈರಲೆಸ್ ಸೆಟ್, ಲಾಗ್ ಟೇಬಲ್, ಕ್ಯಾಲ್ಕುಲೇಟರ್ ಹಾಗೂ ರಿಸ್ಟ್ ವಾಚ್‌ಗಳನ್ನು ನಿಷೇಧಿಸಿದೆ. ಅಭ್ಯರ್ಥಿಗಳು ಹಾಗೂ ಕೊಠಡಿಯ ಮೇಲ್ವಿಚಾರಕರು ತರುವುದನ್ನು ನಿಷೇಧಿಸಲಾಗಿದೆ ಎಂದು ಡಿಸಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts