More

    ಮಕ್ಕಳ ಕಾಯ್ದೆಗಳ ಸಮಗ್ರ ಅನುಷ್ಠಾನ ಆಗಬೇಕು; ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ರಾಮತ್ನಾಳ ಸೂಚನೆ

    ಹಾವೇರಿ: ಶಾಲೆಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಪ್ರದರ್ಶನ ಮಾಡಬೇಕು. ಸಲಹಾ ಪೆಟ್ಟಿಗೆ ಇಡಬೇಕು, ಮಕ್ಕಳ ಕ್ಲಬ್‌ಗಳನ್ನು ರಚಿಸಬೇಕು. ಮಕ್ಕಳ ಹಕ್ಕುಗಳು ಹಾಗೂ ಕಾಯ್ದೆಗಳನ್ನು ತಿಳಿದುಕೊಂಡು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರ್‌ಗೌಡ ಜಿ. ರಾಮತ್ನಾಳ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮತ್ತಿತರ ಸಂಸ್ಥೆಗಳ ಸಹಯೋಗದಲ್ಲಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-2015, ಪೊಕ್ಸೋ ಕಾಯ್ದೆ-2012, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ಆರ್.ಟಿ.ಇ.ಕಾಯ್ದೆ-2009 ಹಾಗೂ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016ರ ಕುರಿತು ಜಿಲ್ಲೆಯ ಎಲ್ಲ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಸತಿ ನಿಲಯಗಳ ಪ್ರಾಂಶುಪಾಲರು, ಹಾಸ್ಟೇಲ್ ವಾರ್ಡನ್ ಹಾಗೂ ಮಕ್ಕಳ ಪಾಲನಾ ಸಂಸ್ಥೆಯ ಮುಖ್ಯಸ್ಥರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
    ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ ನ್ಯಾಯ ಕಾಯ್ದೆಯ ಮೂಲ ಉದ್ದೇಶವಾಗಿದೆ. ಎಲ್ಲರೂ ತಮ್ಮ ಕಾರ್ಯವ್ಯಾಪ್ತಿ ಅರಿತುಕೊಂಡು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿದಾಗ ಕಾಯ್ದೆಗಳ ಅನುಷ್ಠಾನ ಸಾಧ್ಯ. ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಮೂಲ ಸೌಲಭ್ಯ ದೊರೆಯಬೇಕು ಎಂದರು.
    ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ ನ್ಯಾಯ ಕಾಯ್ದೆ ಸೇರಿದಂತೆ ಮಕ್ಕಳಿಗೆ ಸಂಬಂಧಿಸಿದ ಕಾಯ್ದೆಗಳ ಅನುಷ್ಠಾನಕ್ಕೆ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕಾಯ್ದೆಗಳ ಅನುಷ್ಠಾನಕ್ಕೆ ಎಲ್ಲ ಇಲಾಖೆಗಳ ಸಹಕಾರ ಬಹಳ ಅಗತ್ಯ ಎಂದು ತಿಳಿಸಿದರು.
    ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಮಾತನಾಡಿ, ಸಂವಿಧಾನದ ಆಶಯಗಳನ್ನು ಈಡೇರಿಸುವ ಕೆಲಸವಾಗಬೇಕು. ಮಕ್ಕಳ ಹಿತಾಸಕ್ತಿ ಕಾಯ್ದೆಗಳು ಹಾಗೂ ಮೂಲಭೂತ ಹಕ್ಕುಗಳ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
    ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ ಮಾತನಾಡಿ, ಟಿವಿ ಹಾಗೂ ಸಾಮಾಜಿಕ ಜಾಲತಾಣಗಳ ಹಾವಳಿಯಿಂದ ಮಕ್ಕಳ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಜಿಲ್ಲೆಯಲ್ಲಿ ಪೊಕ್ಸೋ ಪ್ರಕರಣಗಳು ಹೆಚ್ಚಾಗಿದ್ದು, ಅಪ್ರಾಪ್ತೆಯರು ಗರ್ಭಿಣಿಯರಾಗುತ್ತಿರುವುದು ವಿಷಾಧಕರ ಸಂಗತಿಯಾಗಿದೆ. ಬಾಲ ನ್ಯಾಯ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಅರಿವು ಮೂಡಿಸಬೇಕು ಎಂದು ಹೇಳಿದರು.
    ಕೊಪ್ಪಳ ಯುನಿಸೆಫ್ ಕಾರ್ಯಕ್ರಮ ಯೋಜನಾ ವ್ಯವಸ್ಥಾಪಕ ಹರೀಶ ಜೋಗಿ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್ ಅವರು ಮಕ್ಕಳ ರಕ್ಷಣಾ ನೀತಿ-2016 ಹಾಗೂ ಇತರ ಕಾಯ್ದೆಗಳ ಕುರಿತು ಉಪನ್ಯಾಸ ನೀಡಿದರು.
    ಸಮಾರಂಭದಲ್ಲಿ ಮಕ್ಕಳ ಹಕ್ಕುಗಳ ಕುರಿತ ಭಿತ್ತಿ ಪತ್ರ ಹಾಗೂ ಮಕ್ಕಳ ರಕ್ಷಣಾ ಘಟಕದಿಂದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು.
    ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಣ್ಣಪ್ಪ ಹೆಗಡೆ ಪ್ರಾಸ್ತಾವಿವಾಗಿ ಮಾತನಾಡಿದರು. ವಿನಯ ಗುಡದೂರ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts