More

    ರೈತ ಸಂಘದಿಂದ ಅಹೋರಾತ್ರಿ ಧರಣಿ 23ರಿಂದ; ರಾಮಣ್ಣ ಕೆಂಚಳ್ಳೇರ

    ಹಾವೇರಿ: ರಾಜ್ಯ ಸರ್ಕಾರ ಬೂಟಾಟಿಕೆಯಿಂದ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನರೇನು ಅರ್ಜಿ ಹಾಕಿ ಕೊಡಿ ಎಂದಿರಲಿಲ್ಲ. ತಮ್ಮ ಪ್ರಚಾರಕ್ಕಾಗಿ ರಾಜ್ಯದ ಖಜಾನೆ ಖಾಲಿ ಮಾಡಿ ರೈತರನ್ನು ನಿರ್ಲಕ್ಷಿಸುತ್ತಿರುವ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಉಳಿಗಾಲವಿಲ್ಲ. ಬರ ಪರಿಹಾರಕ್ಕಾಗಿ ಜ.23ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ಆರಂಭಿಸಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಸರ್ಕಾರಕ್ಕೆ ಎಚ್ಚರಿಸಿದರು.
    ಇಲ್ಲಿನ ಜಿಲ್ಲಾ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡುವಂತೆ ಆಗ್ರಹಿಸಿ ಕಳೆದ ಮೂರು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಕ್ಯಾರೆ ಎನ್ನುತ್ತಿಲ್ಲ. ರೈತರ ಕುರಿತ ಸರ್ಕಾರದ ನಿರ್ಲಕ್ಷ್ಯಧೋರಣೆ ತೋರುತ್ತಲಿದೆ. ಕೂಡಲೇ ಬರ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡುವಂತೆ ಹಾಗೂ ಇತರೆ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
    ಹೆಸ್ಕಾಂ ಹೊಸ ಬೋರ್‌ವೆಲ್‌ಗಳಿಗೆ ಅರ್ಜಿಯನ್ನು ಪಡೆದು ವಿದ್ಯುತ್ ಪೂರೈಸಬೇಕು, ಅಗತ್ಯ ಇರುವ ಕಡೆಗಳಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳನ್ನು ಮೇಲ್ದರ್ಜೆಗೇರಿಸಬೇಕು. ಅಕ್ರಮ-ಸಕ್ರಮ ಯೋಜನೆಯನ್ನು ಕೂಡಲೇ ಪೂರ್ಣಗೊಳಿಸಿ, ರೈತರಿಗೆ ದಿನಂಪ್ರತಿ ಕನಿಷ್ಟ 10 ತಾಸುಗಳ ವಿದ್ಯುತ್ ನೀಡಬೇಕು. ಎಲ್ಲ ಜಿಲ್ಲೆಗಳಲ್ಲಿ ಡಿಸಿಸಿ ಬ್ಯಾಂಕ್ ಸಕ್ರೀಯವಾಗಿದ್ದು, ಹಾವೇರಿ ಜಿಲ್ಲೆಯಲ್ಲಿ ಮಾತ್ರ ಡಿಸಿಸಿ ಬ್ಯಾಂಕ್ ಆರಂಭಕ್ಕೆ ಜನಪ್ರತಿನಿಧಿಗಳು ಮೀನಮೇಷ ಎಣಿಸುತ್ತಿದ್ದಾರೆ. ರೈತರಿಗೆ ಸಕಾಲಕ್ಕೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಕೊಡುವ ಈ ಸಂಸ್ಥೆಯನ್ನು ಜಿಲ್ಲೆಯಲ್ಲಿ ಆರಂಭಿಸಲು ಅಧಿಕಾರಿ ಮತ್ತು ಜನಪ್ರತಿನಿಧಿಗಳು ಮುಂದಾಗಬೇಕೆಂದು ಆಗ್ರಹಿಸಿದರು.
    ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ರೈತರನ್ನು ಕೇವಲವಾಗಿ ಕಾಣುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಸಚಿವ ಸ್ಥಾನಕ್ಕೆ ಅರ್ಹರಲ್ಲ. ಅವರನ್ನು ಸಚಿವ ಸ್ಥಾನದಿಂದ ಕೈಬಿಡುವಂತೆ ಈ ಹಿಂದೆಯೇ ಆಗ್ರಹಿಸಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಆದರೂ ಮತ್ತೆ ರೈತರ ಬಗೆಗೆ ಕೇವಲವಾಗಿ ಮಾತನಾಡಿದ್ದಾರೆ. ಜ.26ರ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಚಿವರಿಗೆ ಘೇರಾವ್ ಹಾಕಲಾಗುವುದು. ಅವರಿಗೆ ಧ್ವಜಾರೋಹಣಕ್ಕೆ ಅವಕಾಶ ನೀಡದೇ ರೈತರಿಂದಲೇ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
    ಸಂಘದ ಪದಾಧಿಕಾರಿಗಳಾದ ಶಿವಯೋಗಿ ಹೊಸಗೌಡ್ರ, ದಿಳ್ಳೆಪ್ಪ ಮಣ್ಣೂರ, ಮಾಲತೇಶ ಪೂಜಾರ, ಶಿವಬಸಪ್ಪ ಗೋವಿ, ಮಹ್ಮದಗೌಸ್ ಪಾಟೀಲ, ಎ.ಮರಿಗೌಡ್ರ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts