More

    ಮಕ್ಕಳ ಸ್ನೇಹಿ ಜಿಲ್ಲೆಯಾಗಲು ಶ್ರಮಿಸಿ; ಶಾಲೆಬಿಟ್ಟ ಮಕ್ಕಳನ್ನು ಪತ್ತೆ ಮಾಡಿ; ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಸೂಚನೆ

    ಹಾವೇರಿ: ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ ಹಾಗೂ ಮಕ್ಕಳ ಕಾಣೆ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ 11 ಇಲಾಖೆಗಳ ಅಧಿಕಾರಿಗಳು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಂಡು ಬಾಲ್ಯ ವಿವಾಹ, ಬಾಲ ಕಾರ್ಮಿಕರು ಹಾಗೂ ಮಕ್ಕಳ ಕಾಣೆ ಪ್ರಕರಣಗಳು ಕಂಡುಬಂದಲ್ಲಿ ಪ್ರಕರಣಗಳನ್ನು ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಅಧಿಕಾರಿಗಳಿಗೆ ಸೂಚಿಸಿದರು.
    ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೋಮವಾರ ಎಲ್ಲ ತಾಲೂಕುಗಳ ತಹಶೀಲ್ದಾರರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದೊಂದಿಗೆ ತಾಲೂಕು ಮಟ್ಟದ ಸಮಿತಿಗಳ ರಚನೆ ಮತ್ತು ಅವುಗಳ ಕಾರ್ಯಚಟುವಟಿಕೆ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
    ಅಂಗನವಾಡಿ ಕಾರ್ಯಕರ್ತೆಯರಿಗೆ, ಸೂಪರವೈಸರ್‌ಗಳಿಗೆ ಬಾಲ್ಯ ವಿವಾಹ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಕಾನೂನು ಜಾಗೃತಿ ನೀಡಬೇಕು. ಮಕ್ಕಳ ರಕ್ಷಣಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಸಿಬ್ಬಂದಿಗೆ, ಪಾಲಕರಿಗೆ ಮಕ್ಕಳ ಹಕ್ಕು, ರಕ್ಷಣೆಗಳ ಬಗ್ಗೆ ಸ್ಪಷ್ಟ ಅರಿವು ಮೂಡಿಸುವ ಮೂಲಕ ಮಕ್ಕಳ ಸ್ನೇಹಿ ಜಿಲ್ಲೆಯಾಗಿಸಲು ಶ್ರಮಿಸಬೇಕು ಎಂದು ತಿಳಿಸಿದರು.
    ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಉಚಿತ ಶಿಕ್ಷಣ, ಸಮವಸ್ತ್ರ, ಮಧ್ಯಾಹ್ನ ಬಿಸಿಯೂಟ ಹಾಗೂ ಪೌಷ್ಠಿಕ ಆಹಾರ, ವಿದ್ಯಾರ್ಥಿ ವೇತನದಂತಹ ಹಲವು ಸೌಲಭ್ಯಗಳನ್ನು ನೀಡುತ್ತಿದ್ದರೂ ಮಕ್ಕಳು ಶಾಲೆಯಿಂದ ಹೊರಗುಳಿಯುತ್ತಿರುವ ಪ್ರಕರಣಗಳು ಮುಂದುವರೆದಿರುವುದು ಬೇಸರದ ಸಂಗತಿ. ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಕಾರ್ಯನಿರ್ವಹಿಸಿ ಎಂದು ಸೂಚನೆ ನೀಡಿದರು.
    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ವಿವಿಧ ತಾಲೂಕುಗಳ ತಹಶೀಲ್ದಾರ್‌ಗಳು, ಸಿಡಿಪಿಒಗಳು, ಸ್ವಯಂ ಸೇವಾ ಸಂಸ್ಥೆ ಪ್ರತಿನಿಧಿಗಳು ಉಪಸ್ಥಿತರಿದ್ದರು.
    67 ಪೋಕ್ಸೋ ಪ್ರಕರಣ ದಾಖಲು
    ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ ಫೆಬ್ರುವರಿಯಿಂದ ಈವರೆಗೆ 67 ಪ್ರಕರಣಗಳು ದಾಖಲಾಗಿವೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಮುಂದಾಗಬೇಕು ಹಾಗೂ ಮಕ್ಕಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಪೋಕ್ಸೋ ಪ್ರಕರಣ ಮುಕ್ತ ಜಿಲ್ಲೆಯನ್ನಾಗಿಸಲು ಶ್ರಮಿಸೋಣ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟನದ ಅಧ್ಯಕ್ಷ ಎಚ್.ಎಸ್.ಮಜೀದ್ ಹೇಳಿದರು.

    ಕೋಟ್:
    ಅಂಗನವಾಡಿಗಳಲ್ಲಿ ಬಾಲವಿಕಾಸ ಸಮಿತಿ ಸಭೆಯನ್ನು ನಿಯಮಿತವಾಗಿ ನಡೆಸಿ, ಅಪೌಷ್ಠಿಕ ಹಾಗೂ ತೀವ್ರ ಅಪೌಷ್ಠಿಕ ಮಕ್ಕಳನ್ನು ಗುರುತಿಸಬೇಕು. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಲ್ಲೂ ಶುದ್ಧ ಕುಡಿಯುವ ನೀರು, ಶೌಚಗೃಹ, ಸ್ವಂತ ಕಟ್ಟಡ, ಕಾಂಪೌಂಡ್ ನಿರ್ಮಾಣದ ಕುರಿತು ಕ್ರಮ ಕೈಗೊಳ್ಳಿ.
    ಶೇಖರಗೌಡ ರಾಮತ್ನಾಳ, ಸದಸ್ಯ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts