More

    ಗಣರಾಜ್ಯೋತ್ಸವ ನಿಮಿತ್ತ ವಿವಿಧ ಸಾಧಕರಿಗೆ ಸನ್ಮಾನ; ಅರ್ಥಪೂರ್ಣ ಕಾರ್ಯಕ್ರಮ ಆಚರಣೆಗೆ ಸಿದ್ಧತೆ ನಡೆಸಿ; ಡಿಸಿ ರಘುನಂದನ ಮೂರ್ತಿ ಸೂಚನೆ

    ಹಾವೇರಿ: ಜಿಲ್ಲಾಡಳಿತದ ವತಿಯಿಂದ ಜ.26ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಶಿಸ್ತುಬದ್ಧವಾಗಿ ಆಚರಿಸಲಾಗುವುದು. ಸಾಹಸ, ಶೌರ್ಯ, ಕ್ರೀಡೆ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಗುವುದು. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸೂಚನೆ ನೀಡಿದರು.
    ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದ ಸ್ವಚ್ಛತೆ, ವೇದಿಕೆ ಅಲಂಕಾರ, ಕುಡಿಯುವ ನೀರು ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ತೋಟಗಾರಿಕೆ ಇಲಾಖೆ, ನಗರಸಭೆ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸೇರಿದಂತೆ ಸಂಬಂದಪಟ್ಟ ಇಲಾಖೆ ಅಧಿಕಾರಿಗಳು ಕೈಗೊಳ್ಳಬೇಕು ಎಂದು ಸೂಚಿಸಿದರು.
    ಸರ್ಕಾರಿ ಕಚೇರಿಗಳು, ನಗರದ ವೃತ್ತಗಳಿಗೆ ದೀಪಾಲಂಕಾರ ಮಾಡಬೇಕು. ಸನ್ಮಾನಿತರಿಗೆ, ಮಾಧ್ಯಮದವರಿಗೆ, ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಬೇಕು. ಆಮಂತ್ರಣ ಪತ್ರಿಕೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ನಾಗರಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಮಾಡಬೇಕು ಎಂದರು.
    ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ವೇದಿಕೆ ಸಿದ್ಧತೆ ಒಳಗೊಂಡಂತೆ ಗಣರಾಜ್ಯೋತ್ಸವದ ವಿವಿಧ ಸಿದ್ಧತೆಗಳ ಹಂಚಿಕೆ ಮಾಡಿ ಆದೇಶ ಹೊರಡಿಸಲಾಗುವುದು. ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಸಿದ್ಧತೆ ಕೈಗೊಳ್ಳುವಂತೆ ಸಲಹೆ ನೀಡಿದರು.
    ಅಪರ ಜಿಲ್ಲಾಧಿಕಾರಿ ಪೂಜಾರ ವೀರಲಮಲ್ಲಪ್ಪ ಮಾತನಾಡಿ, ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಹಾಗೂ ಸಮರ್ಪಣಾ ಭಾವದಿಂದ ಹಬ್ಬದ ರೀತಿಯಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಬೇಕು. ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಸೂಚಿಸಿದರು.
    ಸಭೆಯಲ್ಲಿ ಉಪವಿಭಾಗಾಧಿಕಾರಿ ಚನ್ನಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಉಮೇಶಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಶೋಕ ಗದ್ದಿಗೌಡರ, ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts