ಸರ್ಕಾರಿ ಮಹಿಳಾ ಕಾಲೇಜಿಗೆ ಬಸ್ ಬಿಡಿ; ರಸ್ತೆ ಸಂಚಾರ ತಡೆದು ಪ್ರತಿಭಟನೆ

3 HVR 2
Published on

ಹಾವೇರಿ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಬಸ್ ಸೌಕರ್ಯ ಕಲ್ಪಿಸುವುದು ಸೇರಿದಂತೆ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ವಾಲ್ಮೀಕಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕೆಲಕಾಲ ಮಾನವ ಸರಪಳಿ ನಿರ್ಮಿಸಿದರು. ಸಾರಿಗೆ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಉಪ ತಹಶೀಲ್ದಾರ ಅಮೃತಗೌಡ ಪಾಟೀಲ, ಡಿಪೊ ಮ್ಯಾನೇಜರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲರಿಗೆ ಮನವಿ ಪತ್ರ ಸಲ್ಲಿಸಿದರು. ಜಿಲ್ಲೆಯಲ್ಲಿ ಬಸ್‌ಗಳ ಸಮಸ್ಯೆ, ಹಾಸ್ಟೆಲ್ ಸಮಸ್ಯೆ, ಹಲವು ಸರ್ಕಾರಿ ಶಾಲಾ- ಕಾಲೇಜುಗಳಲ್ಲಿ ಮೂಲಸೌಲಭ್ಯ ಕೊರತೆ ಇದೆ. ಸರ್ಕಾರಿ ಶಾಲಾ-ಕಾಲೇಜುಗಳ ಸುಧಾರಣೆಗಾಗಿ ಕೊಠಾರಿ ಆಯೋಗ ಸೇರಿದಂತೆ ಅನೇಕ ಶಿಕ್ಷಣ ತಜ್ಞರು, ಶ್ರಮಿಸಿದ್ದಾರೆ. ಅದರೂ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ನಿರಂತರವಾಗಿ ಹೋರಾಟ ನಡೆಯುತ್ತಿದ್ದು, ಮಾಧ್ಯಮದಲ್ಲಿ ವಿಶೇಷ ವರದಿಗಳು ಪ್ರಕಟವಾಗುತ್ತಿವೆ. ಆದರೂ ಸರ್ಕಾರ ಈ ನಿವಾರಣೆಗೆ ಮುಂದಾಗುತ್ತಿಲ್ಲ. ಹಾಸ್ಟೆಲ್‌ಗೆ ಅರ್ಜಿ ಹಾಕುವ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸಿಗುತ್ತಿಲ್ಲ. ಹಾಸ್ಟೆಲ್‌ನಲ್ಲಿ ಗುಣಮಟ್ಟದ ಆಹಾರ ಸಿಗುತ್ತಿಲ್ಲ. ಬೆಲೆ ಏರಿಕೆಯಿಂದಾಗಿ ಸದ್ಯ ಸರ್ಕಾರ ನೀಡುತ್ತಿರುವ ಹಾಸ್ಟೆಲ್ ಭತ್ಯೆ ಸಾಕಾಗುತ್ತಿಲ್ಲ. ಇದರಿಂದ ವಿದ್ಯಾರ್ಥಿ ಸಮುದಾಯ ನರಳುವಂತಾಗಿದೆ.
ವಿದ್ಯಾರ್ಥಿಗಳಿಗೆ ವಿತರಿಸಬೇಕಾದ ಬಾಕಿ ಇರುವ ಬೈಸಿಕಲ್, ಸಮವಸ್ತ್ರ, ವಿದ್ಯಾರ್ಥಿವೇತನ, ವಿದ್ಯಾಸಿರಿ, ಪಠ್ಯಪುಸ್ತಕ, ಫೆಲೋಶಿಫ್ ಮುಂತಾದ ಶೈಕ್ಷಣಿಕ ಪ್ರೋತ್ಸಾಹ ಯೋಜನೆಗಳನ್ನು ರಾಜ್ಯ ಸರ್ಕಾರ ನಿಗದಿತ ಶೈಕ್ಷಣಿಕ ವೇಳೆಯೊಳಗೆ ಜಾರಿಗೊಳಿಸಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಒದಗಿಸಬೇಕು, ನೂತನ ಹಾವೇರಿ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕ ಸೇರಿ ಮೂಲ ಸೌಕರ್ಯ ಒದಗಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಪ್ರತಿಭಟನಾಕಾರರು ಮುಂದಿಟ್ಟರು.
ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಸಹ ಕಾರ್ಯದರ್ಶಿ ಬಸವರಾಜ ಬೋವಿ, ತಾಲೂಕು ಕಾರ್ಯದರ್ಶಿ ಕಾವ್ಯಾ ಹನಗೊಡಿಮಠ, ಅಭಿಷೇಕ ಗುದಗಿ, ಸುಜಾತಾ ಕಮ್ಮಾರ, ಶಕುಂತಲಾ ತಿಮ್ಮನಹಳ್ಳಿ, ಲಕ್ಷ್ಮೀ ಪಿ.ಕೆ., ನಂದಾ ಸುಬರಗಟ್ಟಿ, ಪವಿತ್ರ ಎಸ್., ಯಶೋಧಾ ಲಮಾಣಿ, ವಿದ್ಯಾ ಮುಂದಲಮನಿ, ದೀಪಾ ಕ್ವಾಟಿ, ಅಂಬಿಕಾ ಮಿರಗಾಣಿ, ಪೂರ್ಣಿಮಾ ಸಂಗಮ್ಮನವರ, ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net