

ಹಾವೇರಿ: ಎಸ್ಎಸ್ಎಲ್ಸಿ ಪರೀಕ್ಷೆ ಮಾ.21ರಿಂದ ಏಪ್ರಿಲ್ 4ರವರೆಗೆ ನಡೆಯಲಿದೆ. ಶುಕ್ರವಾರ ಮೊದಲ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಜ್ಜಾಗಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಕಾತರರಾಗಿದ್ದಾರೆ.
ಜಿಲ್ಲೆಯ 80 ಪರೀಕ್ಷಾ ಕೇಂದ್ರಗಳಲ್ಲಿ 1,089 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 24,736 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ಕನ್ನಡ ವಿಷಯದ ಪರೀಕ್ಷೆ ನಡೆಯಲಿದೆ. ಎಲ್ಲ ಕೊಠಡಿಗಳಿಗೂ ವೆಬ್ ಕಾಸ್ಟಿಂಗ್ ಮೂಲಕ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ ಎಂದು ಡಿಡಿಪಿಐ ಸುರೇಶ ಹುಗ್ಗಿ ಹಾಗೂ ಡಯಟ್ ಪ್ರಾಚಾರ್ಯ ಗಿರೀಶ ಪದಕಿ ತಿಳಿಸಿದ್ದಾರೆ.