ಉಪಚುನಾವಣೆಯಲ್ಲಿ ಮೈತ್ರಿ ಕುರಿತು ಕಾಂಗ್ರೆಸ್​ ಹೈಕಮಾಂಡ್​ ನಿರ್ಧಾರ ಎಂದ ಎಚ್​ಡಿಡಿ

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಮೈತ್ರಿ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜೆಡಿಎಸ್​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಚ್​.ಡಿ. ದೇವೇಗೌಡ ನಾವು ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. 14 ತಿಂಗಳಲ್ಲಿ ಅನುಭವಿಸಿದ ನೋವನ್ನು ಅವರು ಹೊರಹಾಕಿದ್ದಾರೆ. ನನಗೂ ಅದರ ಬಗ್ಗೆ ಗೊತ್ತಿದೆ. ನಾನು ಆ ಕುರಿತು ಮಾತನಾಡುವುದಿಲ್ಲ. ನಾಳೆ ನಮ್ಮ ಪಕ್ಷದ ಹಿರಿಯರ ಸಭೆ ಕರೆಯುತ್ತೇನೆ. ಅಲ್ಲಿ ಎಲ್ಲವನ್ನೂ ಚರ್ಚಿಸಿ ಅಭಿಪ್ರಾಯ ಪಡೆಯುತ್ತೇನೆ. ಮೈತ್ರಿ ಬೇಡವೆಂದು ಎಲ್ಲರೂ ಹೇಳುತ್ತಿದ್ದಾರೆ. ನಾಳೆಯ ಸಭೆಯಲ್ಲಿ ಈ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಪ್ರತಿಪಕ್ಷ ನಾಯಕರನ್ನು ನೇಮಕ ಮಾಡುವ ವಿಚಾರಣದಲ್ಲಿ ಕಾಂಗ್ರೆಸ್​ ಹೈಕಮಾಂಡ್​ಗೆ ಗೊಂದಲವಿದೆ. ಹೀಗಾಗಿ ನಾವು ಮತ್ತಷ್ಟು ಗೊಂದಲ ಮಾಡುವುದಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್​ ಗಾಂಧಿ ಮೈತ್ರಿ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಚುನಾವಣೆ ನಡೆಯುತ್ತಿದೆ. ಹೀಗಾಗಿ ಅದರ ಜತೆಯಲ್ಲೇ ನಮ್ಮಲ್ಲೂ ಚುನಾವಣೆ ಘೋಷಣೆಯಾಗಿದೆ. ಅದರಲ್ಲಿ ವಿಶೇಷವೇನಿಲ್ಲ ಎಂದು ತಿಳಿಸಿದರು.

Leave a Reply

Your email address will not be published. Required fields are marked *