More

    ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿ

    ಕುಶಾಲನಗರ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ಮಕ್ಕಳಿಗೆ ಶಿಕ್ಷಕರು ಹಾಗೂ ಪಾಲಕರು ಆತ್ಮಸ್ಥೈರ್ಯ ತುಂಬಬೇಕು ಎಂದು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಹೇಳಿದರು.

    ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ವತಿಯಿಂದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಸಿದ್ಧತೆ ಕುರಿತು ಕುಶಾಲನಗರ ಫಾತಿಮ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಯಾವುದೇ ಪರೀಕ್ಷೆ ಭೀತಿ ಮೂಡಿಸದೆ ಆತ್ಮವಿಶ್ವಾಸ ಬೆಳೆಸಬೇಕು. ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಎಲ್ಲ ಪ್ರೌಢಶಾಲೆಗಳಲ್ಲಿ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ ಎಂದು ಹೇಳಿದರು.

    ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಜ್ಯದಲ್ಲೇ 9ನೇ ಸ್ಥಾನ ಪಡೆದಿತ್ತು. ಪ್ರಸ್ತುತ ವರ್ಷದಲ್ಲಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಗಳಿಕೆಗೆ ಹೆಚ್ಚಿನ ಶ್ರಮ ವಹಿಸಲಾಗಿದೆ. ಜಿಲ್ಲೆಯು ಈ ಬಾರಿ 5ರೊಳಗೆ ಸ್ಥಾನ ಗಳಿಸಲು ಪ್ರಯತ್ನ ನಡೆದಿದೆ ಎಂದು ತಿಳಿಸಿದರು.
    ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, ತಾಲೂಕಿನಲ್ಲಿ ಉತ್ತಮ ಫಲಿತಾಂಶ ಗಳಿಕೆಗೆ ಎಲ್ಲ ಪ್ರೌಢಶಾಲೆಗಳಲ್ಲಿ ಶಿಕ್ಷಕರು ಹೆಚ್ಚಿನ ಶ್ರಮ ವಹಿಸುತ್ತಿದ್ದು ಉತ್ತಮ ಫಲಿತಾಂಶ ನಿರೀಕ್ಷಿಸಲಾಗಿದೆ ಎಂದರು.

    ತಾಲೂಕು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಕಾಳನಾಯಕ್ ಮಾತನಾಡಿ, ಪರೀಕ್ಷಾ ಸಂದರ್ಭದಲ್ಲಿ ಮಕ್ಕಳಿಗೆ ಯಾವುದೇ ಒತ್ತಡ ನೀಡದೆ ಅವರಲ್ಲಿ ಪರೀಕ್ಷೆ ಕುರಿತು ಪ್ರೇರೇಪಣೆ ನೀಡಬೇಕು. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

    ತಾಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಜಿ.ಎಂ.ಹೇಮಂತ್ ಮಾತನಾಡಿದರು. ತಾಲೂಕು ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಕೆ.ಬಿ.ರಾಧಾಕೃಷ್ಣ, ಬಿಆರ್‌ಪಿ ಎಸ್.ಎನ್.ಲೋಕೇಶ್, ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಬಿ.ಎನ್.ಪುಷ್ಪಾ, ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ.ವಿ.ಮಂಜೇಶ್, ಫಾತಿಮ ಕಾನ್ವೆಂಟ್ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಸಿಸ್ಟರ್ ತೆರೆಸಾ ಆ್ಯನ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts