

ಬೆಂಗಳೂರು: ರಾಜ್ಯದ ಹಲವೆಡೆ ಅ.9ರಿಂದ ಮುಂದಿನ 3 ದಿನ ಬಿರುಸಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಉಡುಪಿ, ದಕ್ಷಿಣ ಕನ್ನಡ,ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅ.9ರಿಂದ ಅ.11 ರವರೆಗೆ ಹಾಗೂ ಚಿಕ್ಕಬಳ್ಳಾಪುರ, ಕೋಲಾರ, ಉತ್ತರ ಕನ್ನಡದಲ್ಲಿ ಅ.10ರಿಂದ ಮುಂದಿನ 2 ದಿನ ಜೋರು ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರದಲ್ಲಿ ಅ.9 ಮತ್ತು ಚಾಮರಾಜನಗರದಲ್ಲಿ ಅ.11ರಂದು ರಭಸವಾಗಿ ಮಳೆಯಾಗುವುದರಿಂದ ಯೆಲ್ಲೋ ಅಲರ್ಟ್ ಇರಲಿದೆ.
ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ತುಮಕೂರು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಸೇರಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರ ಮತ್ತು ಅದರ ಸುತ್ತಮುತ್ತ ಪ್ರದೇಶಗಳಲ್ಲಿ ಮುಂದಿನ 5 ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಈ ಅವಧಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸುರಿಯಲಿದೆ. ಗರಿಷ್ಠ, ಕನಿಷ್ಠ ತಾಪಮಾನ ಕ್ರಮವಾಗಿ 29 ಮತ್ತು 20 ಡಿ.ಸೆ. ಇರಲಿದೆ.
ಶಕ್ತಿ ಚಂಡಮಾರುತ ಈಗಾಗಲೇ ನಿಷ್ಕ್ರಿಯವಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕರಾವಳಿ, ಮಲೆನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕರ್ನಾಟಕದಲ್ಲಿ ಮಳೆ ತಗ್ಗಿದ್ದು, ಒಣಹವೆ ಇರಲಿದೆ. ಅ.15ರ ವೇಳೆಗೆ ಹಂತ ಹಂತವಾಗಿ ದೇಶಾದ್ಯಂತ ನೈಋತ್ಯ ಮಾನ್ಸೂನ್ ಹಿಂಪಡೆಯಲಾಗುತ್ತದೆ.
ಸಿ.ಎಸ್.ಪಾಟೀಲ್, ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ.