

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಈಗಾಗಲೇ ಮೋಡ ಕವಿದ ವಾತಾವರಣವಿದ್ದು, ದಿನವಿಡಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು, ಕೊಡಗು, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಅತ್ಯಧಿಕ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರದಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. (ದಿಗ್ವಿಜಯ ನ್ಯೂಸ್)