

ಬೆಂಗಳೂರು: ರಾಜ್ಯದಲ್ಲಿ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಶುರುವಾಗಲಿದೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ, ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಿಸಿದೆ.
ನಾಡಿದ್ದೇ ಅಂದರೆ ಆ.22ರಿಂದ ಮತ್ತೆ ಮಳೆ ಶುರುವಾಗಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ, ಉಡುಪಿ, ದಕ್ಷಿಣಕನ್ನಡ, ಉತ್ತರ ಕನ್ನಡದಲ್ಲಿ ಆ.22ರಿಂದ ಆ.24ರವರೆಗೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಕೋಲಾರದಲ್ಲಿ ಆ.23ರಿಂದ ಮುಂದಿನ ಎರಡು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಮತ್ತು ಚಾಮರಾಜನಗರದಲ್ಲಿ ಆ.24ರಂದು ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಈ ತಿಂಗಳ ಮೊದಲ 10 ದಿನವರೆಗೆ ಸುರಿದಿದ್ದ ಭಾರಿ ಮಳೆ ನಂತರ ಕುಂಠಿತವಾಯಿತು. ಆ.14ರಿಂದ ಆ.20ರವರೆಗೆ 50 ಮಿಮೀ ಮಳೆ ಬದಲಾಗಿ 13 ಮಿಮೀ ಮಳೆಯಾಗಿದ್ದು, ಶೇ.74 ವಾಡಿಕೆಗಿಂತ ಕಡಿಮೆ ಸುರಿದಿದೆ.