

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಬೆಂಗಳೂರು ನಗರ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುರುವಾರವೂ ಧಾರಾಕಾರವಾಗಿ ಮಳೆಯಾಯಿತು. ಕರಾವಳಿ, ಉತ್ತರ ಕರ್ನಾಟಕದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಮುಂದಿನ ಐದಾರು ದಿನ ಇನ್ನಷ್ಟು ಬಿರುಸಾಗಿ ಸುರಿಯುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆ.15ರಿಂದ ಆ.20ರವರೆಗೆ ಜೋರು ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ, ಆರೆಂಜ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ 115 ಮಿಮೀನಿಂದ 204 ಮಿಮೀವರೆಗೆ ಮಳೆ ಸುರಿಯಬಹುದು.ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಆ.15ರಂದು ಮತ್ತು ಬೀದರ್, ವಿಜಯಪುರ, ಯಾದಗಿರಿಯಲ್ಲಿ ಆ.16ರಂದು ಯೆಲ್ಲೋ ಅಲರ್ಟ್ ಇರಲಿದೆ.
ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ. ಕೋಲಾರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಮತ್ತು ಗದಗದಲ್ಲಿ ಮುಂದಿನ 5 ದಿನ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ.
ವಾಡಿಕೆಯಷ್ಟೇ ಮಳೆ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿಮಳೆ ಅಭಾವ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಹೇಳಿದ್ದರೂ ಆ.1ರಿಂದ ಆ.12ರವರೆಗೆ ವಾಡಿಕೆಯಷ್ಟೇ ಬಿದ್ದಿದೆ. ಆದರೆ, ಮಲೆನಾಡು, ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆ ಕೊರತೆಯಾದರೆ, ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕವಾಗಿ ಸುರಿದಿದೆ.