ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಬಿರುಸು:5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

rain (3)
Published on

ಬೆಂಗಳೂರು: ಪ್ರವಾಹದಿಂದ ಉತ್ತರ ಭಾರತದ ರಾಜ್ಯಗಳು ತತ್ತರಿಸಿರುವ ನಡುವೆಯೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ ತುಸು ಬಿರುಸಾಗಿ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಮೈಸೂರು, ಉತ್ತರ ಕನ್ನಡ, ಉಡುಪಿ ಸೇರಿ ರಾಜ್ಯದ ಇತರ ಭಾಗಗಳಲ್ಲಿ ಬುಧವಾರ ಸಾಧಾರಣ ಮಳೆಯಾಗಿತ್ತು. ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಮುಂದಿನ 2 ದಿನ ಹಾಗೂ ಕೊಪ್ಪಳ, ರಾಯಚೂರು, ವಿಜಯನಗರದಲ್ಲಿ ಸೆ.12ರಿಂದ ಸೆ.14ರವರೆಗೆ ಜೋರಾಗಿ ಮಳೆಯಾಗುವ ಸಂಭವ ಇರುವುದರಿಂದ ಇಲಾಖೆ, ಯೆಲ್ಲೋ ಅಲರ್ಟ್ ಕೊಟ್ಟಿದೆ. ಮಂಡ್ಯ, ಮೈಸೂರಿನಲ್ಲಿ ಸೆ.11 ಮತ್ತು ಬೆಳಗಾವಿಯಲ್ಲಿ ಸೆ.15 ರಂದು ಯೆಲ್ಲೋ ಅಲರ್ಟ್ ಇರಲಿದೆ. ಈ ವೇಳೆ ಕೆಲ ಭಾಗಗಳಲ್ಲಿ ಗಂಟೆಗೆ 40 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರದಲ್ಲಿ ಮುಂದಿನ 5 ದಿನ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ. ಈ ಅವಧಿಯಲ್ಲಿ ಕೆಲ ಆಯ್ದ ಪ್ರದೇಶಗಳಲ್ಲಿ ತುಸು ಜೋರಾಗಿ ಮಳೆ ಬೀಳಲಿದೆ.

ಬೆಂಗಳೂರು ನಗರ ಮತ್ತು ಅದರ ಸುತ್ತಮುತ್ತ ಪ್ರದೇಶಗಳಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದೆ.ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಮತ್ತು 21 ಡಿ.ಸೆ. ದಾಖಲಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net