ರಾಜ್ಯದಲ್ಲಿ 5 ದಿನ ಭಾರಿ ಮಳೆ: ಜೂ.12ರಿಂದ ಏಳು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​​

rain
Published on

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪ್ರಬಲಗೊಂಡಿರುವ ಹಿನ್ನೆಲೆಯಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಕರಾವಳಿ, ಮಲೆನಾಡು ವ್ಯಾಪ್ತಿಯ ಪ್ರದೇಶಗಳು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಸೋಮವಾರ ಧಾರಾಕಾರವಾಗಿ ಮಳೆ ಸುರಿದಿದೆ. ಕೆಲವೆಡೆ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಿತ್ತು.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ. ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಜೂ.12ರಿಂದ ಜೂ.13ರವರೆಗೆ ಭಾರಿ ಮಳೆ ಸುರಿಯವ ಸಂಭವ ಇರುವುದರಿಂದ ಹವಾಮಾನ ಇಲಾಖೆ ರೆಡ್​ ಅಲರ್ಟ್​​ ಕೊಟ್ಟಿದೆ. ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿಯೂ ಜೂ.13ರಂದು ಅತಿ ಭಾರಿ ವರ್ಷಧಾರೆಯಾಗುವ ಹಿನ್ನೆಲೆಯಲ್ಲಿ ರೆಡ್​ ಅಲರ್ಟ್​​ ನೀಡಲಾಗಿದೆ. ಈ ಅವಧಿಯಲ್ಲಿ 204 ಮಿಮೀವರೆಗೆ ಮಳೆಯಾಗಲಿದೆ. ಅಲ್ಲದೆ, ಈ ಮೇಲಿನ ಜಿಲ್ಲೆಗಳಲ್ಲಿ ಜೂ.10ರಿಂದ ಜೂ.11ರವರೆಗೆ ಯೆಲ್ಲೋ ಅಲರ್ಟ್​​​ ಇರಲಿದೆ. ಪ್ರತಿ ಗಂಟೆಗೆ 40-50 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರ ತೀರದಲ್ಲಿ ಮನರಂಜನೆ ಚಟುವಟಿಕೆಗಳು ಮತ್ತು ಮೀನುಗಾರಿ ನಡೆಸದಂತೆ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.

ಮೈಸೂರು, ಚಾಮರಾಜನಗರ,ಮೈಸೂರು, ಮಂಡ್ಯ,ರಾಮನಗರ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್​ನಲ್ಲಿ ಜೂ.12ರಿಂದ ಮುಂದಿನ 2 ದಿನ ಬಿರುಸಾಗಿ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಆರೆಂಜ್​ ಅಲರ್ಟ್​​ ನೀಡಲಾಗಿದೆ. ಮುಂದಿನ 2 ದಿನ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​​ ಸಹ ಕೊಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net