More

    ಬೈಕ್ ಟ್ಯಾಕ್ಸಿ ಚಾಲಕರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಕ್ರಮ ಜರಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

    ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಚಾಲಕರಿಗೆ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಅಡ್ಡಿಪಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

    ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಹಲ್ಲೆ ನಡೆಸಲಾಗುತ್ತಿದ್ದು, ಅದಕ್ಕೆ ಕಡಿವಾಣ ಹಾಕಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಬೆಂಗಳೂರಿನ ಮಡಿವಾಳದ ಎ. ಶ್ರೀಕಾಂತ್ ರೆಡ್ಡಿ ಹಾಗೂ ಬೈಕ್ ಟ್ಯಾಕ್ಸಿ ವೆಲ್ಫೇರ್ ಅಸೋಸಿಯೇಷನ್ ಮತ್ತಿತರರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ ಈ ಆದೇಶ ನೀಡಿದೆ.

    ಅರ್ಜಿದಾರರು ಪ್ರಕರಣ ಸಂಬಂಧ ಈ ಹಿಂದೆ ನ್ಯಾಯಾಲಯದ ಮೊರೆ ಹೋಗಿದ್ದಾಗ, ನ್ಯಾಯಾಲಯ ಮುಂದಿನ ಆದೇಶದವರೆಗೆ ಬೈಕ್ ಟ್ಯಾಕ್ಸಿ ಚಾಲಕರ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಜರುಗಿಸುವುದು ಬೇಡ ಎಂದು ತಿಳಿಸಿದೆ. ಅಲ್ಲದೆ, ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಹಲ್ಲೆ ಮತ್ತು ಅವರ ಸೇವೆಗೆ ತಡೆಯೊಡ್ಡುವುದು ಮುಂದುವರಿದಿದೆ.

    ಆ ಕುರಿತು ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಅಡ್ಡಿ ಮಾಡುವವರ ವಿರುದ್ಧ ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕೆಂದು ಎಂದು ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಕೋರಿದರು.

    ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಕಾನೂನುಬಾಹಿರವಾಗಿ ತಡೆಯೊಡ್ಡಲು ಯತ್ನಿಸಿದರೆ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿ ಅರ್ಜಿಯನ್ನು ವಿಲೇವಾರಿ ಮಾಡಿದೆ.

    ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts