More

    ಸಚಿವ ಡಾ.ಕೆ.ಸುಧಾಕರ್ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹೈಕೋರ್ಟ್ ತಡೆ

    ಬೆಂಗಳೂರು: ಚಿಕ್ಕಬಳ್ಳಾಪುರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪ ಸಂಬಂಧ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.

    ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ಪ್ರಶ್ನಿಸಿ ಡಾ.ಕೆ.ಸುಧಾಕರ್ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿದೆ.

    ಇದಕ್ಕೂ ಮುನ್ನ ಸುಧಾಕರ್ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡಿಸಿ, ಅರ್ಜಿದಾರರ ವಿರುದ್ಧ ದಾಖಲಿಸಿರುವ ಪ್ರಕರಣದಲ್ಲಿ ಯಾವುದೇ ಸತ್ಯಾಂಶ ಇಲ್ಲ. ಅರ್ಜಿದಾರರು ಯಾವುದೇ ವ್ಯಕ್ತಿಯನ್ನು ಉದ್ದೇಶಿಸಿ ಹೇಳಿಕೆ ನೀಡಿಲ್ಲ. ಆದರೂ, ಅವರ ವಿರುದ್ಧ ವಿನಾಕಾರಣ ಪ್ರಕರಣ ದಾಖಲಿಸಲಾಗಿದೆ. ಆಂಜನೇಯ ರೆಡ್ಡಿ ಹೆಸರನ್ನು ಎಲ್ಲಿಯೂ ಪ್ರಸ್ತಾಪಿಸದಿದ್ದರೂ, ತಮ್ಮ ವಿರುದ್ಧವೇ ಹೇಳಿಕೆ ನೀಡಿದ್ದಾರೆ ಎಂದು ಅವರು ಊಹೆ ಮಾಡಿಕೊಂಡು, ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆದ್ದರಿಂದ, ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದರು. ವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿತಲ್ಲದೆ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ವಿಚಾರಣೆ ಮುಂದೂಡಿತು.

    ಪ್ರಕರಣವೇನು?: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಚಿಕ್ಕಬಳ್ಳಾಪುರ ಶಾಸಕರಾಗಿದ್ದ ಡಾ.ಕೆ.ಸುಧಾಕರ್ ಅವರನ್ನು ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಸುಧಾಕರ್ ಅವರ ಅರ್ಹತೆ ಮತ್ತು ನೇಮಕಾತಿಯ ಮಾನದಂಡ ಪ್ರಶ್ನಿಸಿ ಆಂಜನೇಯ ರೆಡ್ಡಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು. ಈ ನಡುವೆ ಸುಧಾಕರ್ ಕೆಎಸ್‌ಪಿಸಿಬಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೆ, ರೈತರಿಗೆ ಕಳ್ಳಬಟ್ಟಿ ಕುಡಿಸಿ ಜೈಲು ಸೇರಿದ್ದ ವ್ಯಕ್ತಿ ನನ್ನ ವಿರುದ್ಧ ಹೋರಾಟ ಕಾನೂನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

    ಈ ರೀತಿಯ ಹೇಳಿಕೆ ನೀಡುವ ಮೂಲಕ ತಮ್ಮ ತೇಜೋವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಆಂಜನೇಯ ರೆಡ್ಡಿ, ಸುಧಾಕರ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ದೂರಿನ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಚಿವ ಸುಧಾಕರ್‌ಗೆ ಸಮನ್ಸ್ ಜಾರಿಗೊಳಿಸಿತ್ತು. ಇದರಿಂದ, ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

    ತನ್ನ ನೆಚ್ಚಿನ ನಾಯಕ ಸಿಎಂ ಆಗಲೆಂದು 25 ವರ್ಷದಿಂದ ಗಡ್ಡ ಬಿಟ್ಟ ಅಭಿಮಾನಿ!

    ಭೀಕರ ಅಪಘಾತ: ಕೆಟ್ಟು ನಿಂತಿದ್ದ ಕ್ಯಾಂಟರ್​ಗೆ ಬುಲೆಟ್ ಡಿಕ್ಕಿ, ಯುವಕ-ಯುವತಿ ಸ್ಥಳದಲ್ಲೇ ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts