ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಮೇಘಸ್ಫೋಟದಿಂದಾಗಿ ಗುರುವಾರ (ಆಗಸ್ಟ್ 1) ಭೂಕುಸಿತ ಮತ್ತು ಪ್ರವಾಹ ಉಂಟಾಗಿ 50 ಮಂದಿ ನಾಪತ್ತೆಯಾಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಶುಕ್ರವಾರ(ಆಗಸ್ಟ್ 2)ಮುಂದುವರಿದಿದೆ ಎಂದು ವರದಿಯಾಗಿದೆ.
ಇದನ್ನು ಓದಿ: ವಯನಾಡು ಭೂಕುಸಿತ, ಮುನ್ನೆಚ್ಚರಿಕೆ ನೀಡಿದ್ದರೂ ಕೇರಳ ಸರ್ಕಾರ ಕ್ರಮಕೈಗೊಳ್ಳಲಿಲ್ಲ: ಅಮಿತ್ ಷಾ
ಬಿಯಾಸ್ ನದಿಯಲ್ಲಿ ಉಂಟಾದ ಪ್ರವಾಹದಿಂದಾಗಿ 50 ಮಂದಿ ನಾಪತ್ತೆಯಾಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ಪ್ರವಾಹದಿಂದಾಗಿ ಹಲವು ಮನೆಗಳಿಗೆ ಹಾನಿಯಾಗಿದೆ. ಮೂರು ಜಿಲ್ಲೆಗಳಲ್ಲಿ ಮೇಘಸ್ಫೋಟ ಸಂಭವಿಸಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.
ಕಂಗ್ರಾ, ಕುಲು ಮತ್ತು ಮಂಡಿಯ ಮೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಶುಕ್ರವಾರ(ಆಗಸ್ಟ್ 2) ಗುಡುಗು ಮತ್ತು ಮಿಂಚುಗಳ ಜತೆಗೆ ಭಾರೀ ಮಳೆಯಾಗಲಿದೆ ಎಂದು ಸೂಚಿಸಿರುವ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ.
ಪರಿಹಾರ ಮತ್ತು ರಕ್ಷಣಾ ಕಾರ್ಯ ತ್ವರಿತ ಗತಿಯಲ್ಲಿ ಸಾಗುತ್ತಿದೆ ಎಂದು ಸಿಎಂ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ. ನಮ್ಮ ಪರಿಹಾರ ಮತ್ತು ರಕ್ಷಣಾ ಕಾರ್ಯ ವೇಗವಾಗಿ ನಡೆಯುತ್ತಿದೆ. ಕಂದಾಯ ಸಚಿವ ಜಗತ್ ಸಿಂಗ್ ನೇಗಿ ಸ್ಥಳದಲ್ಲೇ ಇದ್ದಾರೆ. ಪ್ರವಾಹದಿಂದಾಗಿ ರಸ್ತೆಗಳು, ಸೇತುವೆಗಳು ಮತ್ತು ನೀರಿನ ಯೋಜನೆಗಳು ಹಾಳಾಗಿವೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನೆ ಮತ್ತು ಪೊಲೀಸ್ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ ಎಂದು ಅವರು ತಿಳಿಸಿದರು.
ಹಿಮಾಚಲ ಪ್ರದೇಶದ ಮಂಡಿಯಲ್ಲಿನ ಪರಿಸ್ಥಿತಿಯನ್ನು ಪ್ರಧಾನಿ ಮೋದಿ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ಉನ್ನತ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.(ಏಜೆನ್ಸೀಸ್)