ಪ್ರವಾಸೋದ್ಯಮ ಅಭಿವೃದ್ಧಿಗಾಗಿ 300 ಕೋಟಿ ರೂಪಾಯಿಗಳ ಬಂಡವಾಳ ಹೂಡಿಕೆ ಪ್ರಸ್ತಾವನೆ: ಸಚಿವ ಎಚ್​.ಕೆ. ಪಾಟೀಲ್

HK Patil
Published on

ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಇಲಾಖೆಯ ಉನ್ನತಾಧಿಕಾರ ಸಮಿತಿಯು ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 300 ಕೋಟಿಗಳ ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಅನುಮೋದನೆ ನೀಡಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್​.ಕೆ. ಪಾಟೀಲ್ ತಿಳಿಸಿದ್ದಾರೆ.

ಅರಮನೆ ಮೈದಾನದ ತ್ರಿಪುರ ವಾಸಿನಿ ಸಭಾಂಗಣದಲ್ಲಿ ಆರಂಭವಾದ ಮೂರು ದಿನಗಳ ಇಂಡಿಯಾ ಇಂಟರ್ ನ್ಯಾಷನಲ್ ಟ್ರಾವೆಲ್ ಮಾರ್ಟ್ ಪ್ರವಾಸೋದ್ಯಮ ಮೇಳವನ್ನು ಉದ್ಘಾಟಿಸಿ ಮಾತನಾಡಿ ಖಾಸಗಿ ಹೂಡಿಕೆಯಿಂದ ರಾಜ್ಯದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಇನ್ನಷ್ಟು ಅಭಿವೃದ್ಧಿ ಹೊಂದಲಿದ್ದು ಕೆಳವರ್ಗದ ಜನರೂ ಇದರ ಪ್ರಯೋಜನ ಪಡೆಯಲಿದ್ದಾರೆ.

ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದ್ದು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದಿದ್ದಾರೆ. ರಾಜ್ಯ ಸರಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶವನ್ನು ಕಲ್ಪಿಸಿರುವುದರಿಂದ ರಾಜ್ಯದಲ್ಲಿ ಪ್ರವಾಸೋದ್ಯಮವು ಅಭಿವೃದ್ಧಿಗೊಳ್ಳುತ್ತಿದೆ.

HK Patil Tourism

ಬಲತುಂಬುವ ಕಾರ್ಯಕ್ರಮ

ಸ್ಫಿಯರ್ ಟ್ರಾವೆಲ್ ಮೀಡಿಯಾ ನಿರ್ದೇಶಕ ರೋಹಿತ್ ಹಂಗಲ್ ಮಾತನಾಡಿ, ಪ್ರಸ್ತುತ ಪ್ರವಾಸೋದ್ಯಮ ಚೇತರಿಕೆ ಕಾಣುತ್ತಿದ್ದು, ವಿದೇಶಗಳಿಂದ ಭಾರತಕ್ಕೆ ಭೇಟಿ ನೀಡುವವರ ಸಂಖ್ಯೆ ಕ್ರಮೇಣವಾಗಿ ಹಚ್ಚುತ್ತಿದೆ. 'ಇಂಡಿಯಾ ಇಂಟರ್ ನ್ಯಾಷನಲ್ ಟ್ರಾವೆಲ್ ಮಾರ್ಟ್' ದೇಶೀಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಲತುಂಬುವ ಕಾರ್ಯಕ್ರಮವಾಗಿದೆ.

ಕರ್ನಾಟಕ, ರಾಜಸ್ಥಾನ, ತಮಿಳುನಾಡು, ಮಹಾರಾಷ್ಟ್ರ, ಗೋವಾ, ಹಿಮಾಚಲಪ್ರದೇಶ, ಕೇರಳ, ಉತ್ತರಾಖಂಡ, ಉತ್ತರ ಪ್ರದೇಶದ ಪ್ರವಾಸೋದ್ಯಮ ಪಾಲುದಾರರು ತಮ್ಮ ಉದ್ಯಮದ ಅಭಿವೃದ್ಧಿಗಾಗಿ ಅತ್ಯಂತ ಉತ್ಸುಕರಾಗಿ ಪ್ರದರ್ಶನದಲ್ಲಿ ಭಾಗಿಯಾಗುವುದನ್ನು ನಾವು ಕಾಣಬಹುದು. ತೀರ್ಥಯಾತ್ರೆ, ಸಾಹಸ, ಕುಟುಂಬ ಸದಸ್ಯರೊಂದಿಗೆ ಪ್ರವಾಸ ಮತ್ತು ಹನಿಮೂನ್‌ ಮುಂತಾದ ವಿವಿಧ ಪ್ರಕಾರಗಳಲ್ಲಿ ಪ್ಯಾಕೇಜ್‌ಗಳನ್ನು ಹುಡುಕುತ್ತಿರುವವರಿಗೆ ಅಥವಾ ತಮ್ಮ ಕಂಪನಿಯ ಕಾನ್ಫರೆನ್ಸ್ ಗಳಿಗೆ ಸ್ಥಳಗಳನ್ನು ಹುಡುಕುತ್ತಿರುವವರಿಗೆ ಈ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ ಎಂದು ಹೇಳಿದ್ದಾರೆ.

ಪಂಜಾಬ್ ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕಿ ಗುಪ್ತ ಭಂಡಾರಿ, ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಅನಿಲ್ ಕುಮಾರ್ ಸಾಹು ಇನ್ನಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net