ರಾಜ್ಯಾದ್ಯಂತ ಭಾರಿ ಮಳೆ, ಶಾಲೆಗಳಿಗೂ ರಜೆ: ಎಲ್ಲೆಲ್ಲಿ ಎಷ್ಟು ದಿನ? ಇಲ್ಲಿದೆ ಮಾಹಿತಿ..

Heavy Rain
Published on

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ, ಸೇತುವೆ ಮುಳುಗಡೆ ಇತ್ಯಾದಿ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಜನರು ಚಿಂತೆಯಲ್ಲೇ ರಾತ್ರಿ ಕಳೆಯುವಂತಾಗಿದೆ.

ರಾಜ್ಯದಲ್ಲಿ ಇನ್ನೂ ಕೆಲವು ದಿನ ಭಾರಿ ಮಳೆ ಕುರಿತು ಹವಾಮಾನ ಮುನ್ಸೂಚನೆ ನೀಡಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದೀಗ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಇನ್ನೂ ಕೆಲವು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಭಾರಿ ಮಳೆ ಬರುತ್ತಿರುವುದರಿಂದ ಕೊಡಗು ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ ಎಂದು ಜಿಲ್ಲಾಧಿಕಾರಿ ಬಿ.ಸಿ. ಸತೀಶ ಘೋಷಣೆ ಮಾಡಿದ್ದಾರೆ. ಮತ್ತೊಂದೆಡೆ ಚಿಕ್ಕಮಗಳೂರು ಜಿಲ್ಲೆಯಲ್ಲೂ ಅಲರ್ಟ್​ ಇರುವುದರಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ, ಶೃಂಗೇರಿ ಕಳಸ, ಎನ್​.ಆರ್.ಪುರ ತಾಲೂಕು ಮತ್ತು ಅಂಬಳೆ ಹಾಗೂ ಲಕ್ಯಾ ಹೋಬಳಿ ಹೊರತುಪಡಿಸಿ ಚಿಕ್ಕಮಗಳೂರು ತಾಲೂಕಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜು. 6ರಿಂದ 9ರ ವರೆಗೆ ರಜೆ ಎಂದು ಘೋಷಿಸಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.

ಮತ್ತೊಂದೆಡೆ ಉತ್ತರಕನ್ನಡ ಜಿಲ್ಲೆಯ ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಘೋಷಣೆ ಮಾಡಿದ್ದಾರೆ. ಇನ್ನು ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳಲ್ಲೂ ನಾಳೆಯೂ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net