ಬೈಂದೂರು ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಸಂಸದ ರಾಘವೇಂದ್ರ

ವಿಜಯವಾಣಿ ಸುದ್ದಿಜಾಲ ಬೈಂದೂರು
ಕೇಂದ್ರ ಸರ್ಕಾರದಿಂದ ದೊರೆಯುವ ಯೋಜನೆಗಳನ್ನು ಬೈಂದೂರು ಕ್ಷೇತ್ರಕ್ಕೆ ತರುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರ ಭರವಸೆ ನೀಡಿದ್ದಾರೆ.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ತನ್ನ ನೂತನ ಕಚೇರಿ ಹಾಗೂ ಜನಸಂಪರ್ಕ ಸಭೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಜನರಿಗೆ ಅನುಕೂಲವಾಗುವಂತೆ ಮೂಕಾಂಬಿಕಾ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ, ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರಿಗೆ ಮನವಿ ಮಾಡಲಾಗುವುದು. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಅಡೆತಡೆಯ ಬಗ್ಗೆಯೂ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಜಾರಿಗೆ ತಂದು, ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಿಗೆ ಪೈಪ್‌ಲೈನ್ ಮೂಲಕ ನೀರು ಕೊಂಡೊಯ್ಯಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪಕ್ಷಾತೀತವಾಗಿ ಜನರ ಸಮಸ್ಯೆ ಅರಿಯಲು ಇಲ್ಲಿ ತೆರೆಯಲಾಗಿರುವ ಕಚೇರಿ ಜನಸಾಮಾನ್ಯರ ಕಚೇರಿಯಾಗಿದೆ. ಸಂಸದರ ಕಚೇರಿ ಮೂಲಕ ಜನರಿಗೆ ಇನ್ನಷ್ಟು ಸೇವೆ ದೊರಕಿಸಿಕೊಡುತ್ತೇನೆ ಎಂದರು.

ನೂತನ ಕಚೇರಿ ಹಾಗೂ ಜನಸಂಪರ್ಕ ಸಭೆಯನ್ನು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಜಿಪಂ ಸಿಇಒ ಸಿಂಧೂ ರೂಪೇಶ್, ಎಸಿ ಭೂಬಾಲನ್, ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನಾರಾಯಣ ಗುಜ್ಜಾಡಿ, ಇಒ ಕಿರಣ ಪಡ್ನವಿಸ್, ಡಿವೈಎಸ್‌ಪಿ ಬಿ.ಪಿ.ದಿನೇಶ ಕುಮಾರ್, ಕುಂದಾಪುರ ತಹಸೀಲ್ದಾರ್ ತಿಪ್ಪೇಸ್ವಾಮಿ, ತಾಪಂ ಸದಸ್ಯರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೈಂದೂರು ತಹಸೀಲ್ದಾರ್ ಕಿರಣ ಜಿ. ಗೌರಯ್ಯ ಸ್ವಾಗತಿಸಿ, ಗಣಪತಿ ಹೋಬಳಿದಾರ್ ನಿರೂಪಿಸಿದರು. ಬಿಇಒ ಒ.ಆರ್.ಪ್ರಕಾಶ ವಂದಿಸಿದರು.

ಬೈಂದೂರು ವ್ಯಾಪ್ತಿಯಲ್ಲಿ ಕುಡಿಯುವ ನೀರು, ಕಡಲ್ಕೊರೆತ, ಮರಳು ಸಮಸ್ಯೆ, ಡೀಮ್ಡ್ ಪಾರೆಸ್ಟ್ ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಕ್ಕುಪತ್ರ ದೊರಕದಿರುವುದು ಸೇರಿದಂತೆ ಹತ್ತಾರು ಸಮಸ್ಯೆಗಳಿದ್ದು, ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿದಾಗ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ.
– ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ

ಮರಳುಗಾರಿಕೆ ಸಮಸ್ಯೆಯಿಂದ ಈ ಭಾಗದ ಜನರು ಕಂಗೆಟ್ಟಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ ಕೊಲ್ಲೂರು ದೇವಸ್ಥಾನದಲ್ಲಿ ಧರಣಿ ಸತ್ಯಾಗ್ರಹ ಕೈಗೊಳ್ಳುತ್ತೇನೆ.
– ಬಿ.ಎಂ. ಸುಕುಮಾರ ಶೆಟ್ಟಿ, ಶಾಸಕ