More

    ಜಾತಿ ಪ್ರಮಾಣ ಪತ್ರಕ್ಕಾಗಿ ಆಹೋರಾತ್ರಿ ಧರಣಿ

    ಹೊಸದುರ್ಗ: ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಕಾಡುಗೊಲ್ಲ ಸಮುದಾಯದವರು ಅಹೋರಾತ್ರಿ ಧರಣಿ ಬುಧವಾರ ಅರಂಭಿಸಿದರು.

    ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕಾಡುಗೊಲ್ಲ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರವು ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಿದೆ. ಕಾಡುಗೊಲ್ಲ ಸಮುದಾಯಕ್ಕೆ ಪ್ರವರ್ಗ 1ರ ಮೀಸಲಾತಿ ಒದಗಿಸಿದೆ. ಅದರೆ, ನಮ್ಮ ಬಳಿ ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ಇಲ್ಲದ ಕಾರಣ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.

    ಶಾಲಾ ದಾಖಲೆ ಹಾಗೂ ಸರ್ಕಾರಿ ದಾಖಲಾತಿಗಳಲ್ಲಿ ಗೊಲ್ಲ ಎಂದು ಜಾತಿ ನಮೂದಿಸಲಾಗಿದೆ. ವಾಸ್ತವದಲ್ಲಿ ತಾಲೂಕಿನ 54 ಗೊಲ್ಲರಹಟ್ಟಿಗಳಲ್ಲಿ ವಾಸವಾಗಿರುವ ಜನರು ಕಾಡುಗೊಲ್ಲ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅನೇಕ ಬಾರಿ ಜಾತಿ ಪ್ರಮಾಣ ಪತ್ರ ನೀಡುವಂತೆ ತಹಸೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ ಎಂದು ದೂರಿದರು.

    ಜಾತಿ ಪ್ರಮಾಣ ಪತ್ರವಿಲ್ಲದ ಕಾರಣ ಸರ್ಕಾರ ನೀಡಿರುವ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಕೂಡಲೇ ಕಂದಾಯ ಇಲಾಖೆ ಅಧಿಕಾರಿಗಳು ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಆಗ್ರಹಿಸಿದರು.

    ಪಟ್ಟಣದ ಗಣಪತಿ ದೇವಾಲಯದಿಂದ ಪ್ರತಿಭಟನೆ ಅರಂಭಿಸಿ, ಘೋಷಣೆ ಕೂಗುತ್ತಾ ತಾಲೂಕು ಕಚೇರಿ ಅವರಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಟಿ.ಬಿ.ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಾಲೂಕು ಕಚೇರಿ ಆವರಣ ಪ್ರವೇಶಿಸಿ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

    ಸಮಿತಿ ಅಧ್ಯಕ್ಷ ರವೀಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ್, ತಾಪಂ ಮಾಜಿ ಅಧ್ಯಕ್ಷೆ ಪ್ರೇಮಾ ರವೀಂದ್ರ, ಮಾಜಿ ಉಪಾಧ್ಯಕ್ಷೆ ನೇತ್ರಾವತಿ ದೇವರಾಜ್, ಟಿ.ಚಿತ್ತಯ್ಯ, ನಾಗರಾಜ್, ಕರಿಯಪ್ಪ, ಶ್ರೀನಿವಾಸ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts