ಹೊಸಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ಬಾರಿ ಮುಖ್ಯಮಂತ್ರಿಯಾಗಿ ಒಂದು ಕಪ್ಪು ಚುಕ್ಕೆ ಅಲ್ಲದೇ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಹೇಳಿದರು.
ಕಾಂಗ್ರೆಸ್ ಪಕ್ಷದಿಂದ ಸೋಮವಾರ ನಗರದದ ಸಾಯಿಬಾಬ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ನಡೆದ ಪಾದಾಯತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.
ಹಗರಣಗಳನ್ನು ಮಾಡಿ ಜೈಲಿಗೆ ಹೋಗಿ ಬಂದ ಬಿಜೆಪಿ ನಾಯಕರಿಗೆ ಸಿಎಂ ರಾಜೀನಾಮೆ ಕೇಳುವ ನೈತಿಕತೆ ಇಲ್ಲ. ಶೋಷಿತ ಸಮುದಾಯಗಳಿಗೆ ಶಕ್ತಿ ತುಂಬುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ, ಜೆಡಿಎಸ್ ಮುಖಂಡರು ಷಡ್ಯಂತ್ರ ರೂಪಿಸುತ್ತಿದ್ದಾರೆ. ಬಿಜೆಪಿಯ ಕುತಂತ್ರಕ್ಕೆ ಶೋಷಿತ ಸಮುದಾಯಗಳು, ಅಲ್ಪಸಂಖ್ಯಾತರು ಮಾತ್ರವಲ್ಲ ವೀರಶೈವ-ಲಿಂಗಾಯತ ಸಮುದಾಯ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲಲಿದ್ದಾರೆ. ಅವರ ರಾಜಕೀಯ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಇದನ್ನು ಸಹಿಸದ ವಿರೋಧಿಗಳು ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡು ಅವರಿಂದ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸುತ್ತಿರುವುದು ಖಂಡನೀಯ ಎಂದರು.
ಶಾಸಕ ಎಚ್.ಆರ್.ಗವಿಯಪ್ಪ ಮಾತನಾಡಿ, ಸಿದ್ದರಾಮಯ್ಯ ಬಿಜಿನೆಸ್ ಮ್ಯಾನ್ ಅಲ್ಲ. ಅವರು ಸಮಾಜ ಸೇವಕ. ಧ್ವನಿ ಇಲ್ಲದ ಸಮುದಾಯಗಳಿಗೆ ಧ್ವನಿ ನೀಡಿ ಸಮ ಸಮಾಜ ನಿರ್ಮಾಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ಬಸವಾದಿ ಶರಣರ ಹಾದಿಯಲ್ಲಿ ನಡೆಯುತ್ತಿರುವ ಅವರು ದೇಶಕ್ಕೆ ಮಾದರಿ ಆಡಳಿತ ನೀಡಿದ್ದಾರೆ. ವಿರೋಧ ಪಕ್ಷಗಳ ಷಡ್ಯಂತ್ರ, ರಾಜ್ಯಪಾಲರ ಏಕಪಕ್ಷೀಯ ನಡೆಯನ್ನು ನಾವು ಘೋರವಾಗಿ ಖಂಡಿಸುತ್ತೇವೆ. ಇಡೀ ರಾಜ್ಯದಲ್ಲಿ ಜನಾಂದೋಲನ ನಡೆಯಲಿದೆ.
ಹುಡಾ ಅದ್ಯಕ್ಷ ಇಮಾಮ್ ನಿಯಾಜಿ, ಜಿಲ್ಲಾದ್ಯಕ್ಷ ಸೀರಾಜ್ ಶೇಕ್, ಪ್ರಮುಖರಾದ ರಾಣಿ ಸಂಯುಕ್ತ, ಎಲ್.ಸಿದ್ದನಗೌಡ, ಕವಿತಾ ಈಶ್ವರ್ ಸಿಂಗ್, ಹಾಲಪ್ಪ ಇತರರಿದ್ದರು.