More

    ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸದಿದ್ದರೆ ಆ.15ರಿಂದ ಬೃಹತ್ ಚಳವಳಿ

    ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸಿ ಶೀಘ್ರವೇ ಹಕ್ಕುಪತ್ರಗಳನ್ನು ಕೊಡದಿದ್ದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಗಸ್ಟ್ 15ರಿಂದ ಬೃಹತ್ ಚಳವಳಿ ಹಮ್ಮಿಕೊಳ್ಳುವುದಾಗಿ ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ತೀ.ನ.ಶ್ರೀನಿವಾಸ್ ತಿಳಿಸಿದರು.

    ರಾಜ್ಯ ಸರ್ಕಾರ ನಾಡಿನ ಜನರಿಗೆ ಗ್ಯಾರಂಟಿ ಭಾಗ್ಯಗಳನ್ನು ನೀಡುತ್ತಿದೆ. ಅದರಂತೆ ಮಲೆನಾಡು ಭಾಗದಲ್ಲಿ ಲಿಂಗನಮಕ್ಕಿ ಜಲಾಶಯಕ್ಕಾಗಿ ಭೂಮಿ ಕಳೆದುಕೊಂಡ ರೈತರಿಗೆ ಭೂ ಭಾಗ್ಯವನ್ನು ನೀಡಬೇಕಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಹಿಂದಿನ ಬಿಜೆಪಿ ಸರ್ಕಾರ, ಈಗಿನ ಕಾಂಗ್ರೆಸ್ ಸರ್ಕಾರ ಚುನಾವಣೆಗೆ ಮುನ್ನ ಶರಾವತಿ ಸಂತ್ರಸ್ತರ ಹಾಗೂ ಬಗರ್‌ಹುಕುಂ ಸಾಗುವಳಿದಾರರ ಸಮಸ್ಯೆಗಳು ಸೇರಿ ಮಲೆನಾಡು ರೈತರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಮಾತು ಕೊಟ್ಟಿದ್ದವು. ಆದರೆ ಸಮಸ್ಯೆಗಳು ಹಾಗೇ ಉಳಿದಿವೆ. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕಿದೆ ಎಂದು ಒತ್ತಾಯಿಸಿದರು.
    ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಶರಾವತಿ ಸಂತ್ರಸ್ತರ ಸಮಸ್ಯೆಗಳನ್ನು 15 ದಿನದೊಳಗೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಬಿ.ವೈ.ರಾಘವೇಂದ್ರ ಅವರು ಈಗ ಸುಮ್ಮನಾಗಿದ್ದಾರೆ. ರಾಘವೇಂದ್ರ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಶರಾವತಿ ಸಂತ್ರಸ್ತರ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.
    ಅರಣ್ಯ ಇಲಾಖೆ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಕುಂಚೇನಹಳ್ಳಿ ಸೇರಿ ಅನೇಕ ಕಡೆಗಳಲ್ಲಿ ರೈತರ ವಿರುದ್ಧ ಕೇಸ್ ದಾಖಲಿಸಿಕೊಂಡು ದೌರ್ಜನ್ಯ ಆರಂಭಿಸಿದ್ದಾರೆ. ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲೆಗೆ ಬಂದು ರೈತರ ಸಮಸ್ಯೆ ಸೇರಿದಂತೆ ಮಲೆನಾಡು ಭಾಗದ ಸಮಸ್ಯೆಗಳನ್ನು ಬಗೆಹರಿಸಲು ಸಮಿತಿ ರಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕುಂಚೇನಹಳ್ಳಿಯಲ್ಲಿ ತೀರ್ಥನಾಯ್ಕ, ವಾಸುದೇವ ನಾಯ್ಕ, ಶಿವಾಜಿ ನಾಯ್ಕ, ಜಯರಾಮ್ ನಾಯ್ಕ, ವಿನಾಯಕ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts