

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಸ್ಟರ್ ಪ್ಲಾನ್ ಮೂಲಕ ನಿರ್ಮಿತ ಕಾಂಕ್ರೀಟ್ ರಸ್ತೆ ಕಳಪೆಯಾಗಿದೆ. ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯದಲ್ಲಿ ಲೋಕೋಪಯೋಗಿ ಇಲಾಖೆ ಅಭಿಯಂತ ಪರಿಶೀಲನೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ಕಡಬದಲ್ಲಿ ನಡೆಸಿದ ಜನಸಂಪರ್ಕ ಸಭೆಯಲ್ಲಿ ಸುಬ್ರಹ್ಮಣ್ಯ ಗ್ರಾಪಂ ಸದಸ್ಯ ಹಾಗೂ ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ ದೂರು ನೀಡಿದ್ದರು. ರಸ್ತೆ ನಿರ್ಮಾಣಗೊಂಡು ಕೇವಲ ಮೂರು ವರ್ಷವಾಗುವಾಗಲೇ ಅಲ್ಲಲ್ಲಿ ಶಿಥಿಲಗೊಂಡಿದೆ. ಕಳಪೆ ಕಾಂಕ್ರೀಟೀಕರಣ ಕಾಮಗಾರಿ ಹಾಗೂ ಅವೈಜ್ಞಾನಿಕ ಚರಂಡಿ ಕಾಮಗಾರಿ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ತಕ್ಷಣ ಸ್ಪಂದಿಸಿದ ಸಚಿವರು ಸ್ಥಳದಲ್ಲೇ ದೇವಸ್ಥಾನದ ಆಡಳಿತಾಧಿಕಾರಿ ಜುಬಿನ್ ಮೊಹಾಪಾತ್ರ ಮೂಲಕ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಅವರಿಗೆ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದರು.
ಸಚಿವರ ಆದೇಶದಂತೆ ಲೋಕೋಪಯೋಗಿ ಇಲಾಖಾ ಸಹಾಯಕ ಕಾರ್ಯಪಾಲಕ ಅಭಿಯಂತ ಸೋಮ ಬಿ., ಸಹಾಯಕ ಅಭಿಯಂತ ಪ್ರಮೋದ್ ಕುಮಾರ್ ಕೆ.ಕೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಕುಮಾರಧಾರಾವರೆಗಿನ ರಸ್ತೆ, ಚರಂಡಿ, ಕಾಂಕ್ರೀಟೀಕರಣ ಕಾಮಗಾರಿ ಪರಿಶೀಲನೆ ನಡೆಸಿದರು. ಗುತ್ತಿಗೆದಾರ ಜಗದೀಶ್ ಪೈ, ದೇವಳದ ಅಭಿಯಂತರ ಉದಯಕುಮಾರ್, ಸುಬ್ರಹ್ಮಣ್ಯ ಗ್ರಾಪಂ ಸದಸ್ಯ ಹರೀಶ್ ಎಸ್.ಇಂಜಾಡಿ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಪವನ್ ಎಂ.ಡಿ., ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ, ಮಾಸ್ಟರ್ ಪ್ಲಾನ್ ಸಮಿತಿ ಮಾಜಿ ಸದಸ್ಯ ಶಿವರಾಮ ರೈ ಉಪಸ್ಥಿತರಿದ್ದರು.