ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ನಾಲ್ವರು ಪೊಲೀಸ್ ಅಧಿಕಾರಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಪೂರ್ವಾನುಮತಿ ಕೋರಿ ಸಿಬಿಐ ಸಲ್ಲಿಸಿರುವ ಪ್ರಸ್ತಾವನೆಗೆ ತಕ್ಷಣ ಅನುಮೋದನೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಐಎಂಎ ವಂಚನೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.
ಆರೋಪಿಗಳಾಗಿರುವ ನಾಲ್ವರು ಪೊಲೀಸ್ ಅಧಿಕಾರಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಪೂರ್ವಾನುಮತಿ ಕೋರಿ 2019ರ ಡಿ.18ರಂದು ಸಲ್ಲಿಸಿರುವ ಮನವಿಯನ್ನು ಸರ್ಕಾರ ಪರಿಗಣಿಸಿಲ್ಲ ಎಂದು ಸಿಬಿಐ ಪರ ವಕೀಲ ಪಿ. ಪ್ರಸನ್ನಕುಮಾರ್ ತಿಳಿಸಿದರು. ಸರ್ಕಾರ ಶೀಘ್ರ ಕ್ರಮಕ್ಕೆ ಮುಂದಾಗಬೇಕು ಎಂದು ನ್ಯಾಯಪೀಠ ನಿರ್ದೇಶಿಸಿತು.
ಐಎಂಎ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯದ ಮುಂದಿರುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಶೀಘ್ರ ಇತ್ಯರ್ಥಪಡಿಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ವಿಶೇಷ ನ್ಯಾಯಾಲಯದ ಗಮನಕ್ಕೆ ತರುವಂತೆ ಆಡಳಿತ ವಿಭಾಗದ ರಿಜಿಸ್ಟ್ರಾರ್ಗೆ ನ್ಯಾಯಪೀಠ ನಿರ್ದೇಶನ ನೀಡಿತು. ಪ್ರಕರಣದ ತನಿಖಾ ಪ್ರಗತಿ ವರದಿಯನ್ನು ಫೆ. 28ರೊಳಗೆ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದ ಪೀಠ, ಅರ್ಜಿ ವಿಚಾರಣೆಯನ್ನು ಮಾ.5ಕ್ಕೆ ಮುಂದೂಡಿತು.