ಕೈ ತಪ್ಪಿದ ಉಡುಪಿ ಕಮಲಕ್ಕೆ ಹರ್ಷ

ಚಿಕ್ಕಮಗಳೂರು/ಉಡುಪಿ: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದಲ್ಲಿ ಸಂಖ್ಯೆಗಳ ಲೆಕ್ಕಾಚಾರದಲ್ಲಿ ನಡೆದ ಕ್ಷೇತ್ರಗಳ ಹಂಚಿಕೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರ ಕಾಂಗ್ರೆಸ್ ಕೈ ತಪ್ಪಿ ಹೋಗಿದೆ. ಮೈಸೂರು ಕ್ಷೇತ್ರ ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಕಾಂಗ್ರೆಸ್ ನೆಲೆ ಇರುವ, ಪಕ್ಷದ ಅಧ್ಯಕ್ಷೆ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ್ದ ಕ್ಷೇತ್ರವನ್ನು ಕಳೆದುಕೊಳ್ಳಲಾಗಿದೆ.

ಪಕ್ಷದ ಈ ನಿರ್ಧಾರ ಉಡುಪಿ-ಚಿಕ್ಕಮಗಳೂರು ಜಿಲ್ಲೆಗಳ ಕಾಂಗ್ರೆಸ್ ನಾಯಕರಿಗೆ ನಿರಾಸೆ ಮೂಡಿಸಿದ್ದರೆ ಬಿಜೆಪಿ ಪಾಳಯದಲ್ಲಿ ಹರ್ಷ ತಂದಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಎನ್ನುವ ಕಾರಣಕ್ಕೆ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವುದು ತಾತ್ಕಾಲಿಕವಾಗಿ ಸರಿಯಾದ ನಿರ್ಧಾರ ಎನ್ನುವಂತಿದ್ದರೂ ದೂರದೃಷ್ಟಿಯಿಂದ ಆಲೋಚನೆ ಮಾಡಿದರೆ ಇದು ಕಾಂಗ್ರೆಸ್ ಪಕ್ಷಕ್ಕೆ ಆಗುವ ನಷ್ಟವೇ ಸರಿ. ಈ ನಷ್ಟವನ್ನು ಸರಿದೂಗಿಸಿಕೊಳ್ಳಲು ಭವಿಷ್ಯದ ದಿನಗಳಲ್ಲಿ ಸಾಕಷ್ಟು ಹೆಣಗಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕರು ಬೇಸರ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್‌ನ ಪ್ರಮುಖ ಮುಖಂಡರು ಬುಧವಾರ ಬೆಳಗ್ಗೆ ಸಭೆ ಸೇರಿ ಚರ್ಚೆ ಮಾಡಿ ಯಾವ ಕಾರಣಕ್ಕೆ ಉಡುಪಿ -ಚಿಕ್ಕಮಗಳೂರು ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷಕ್ಕೆ ಉಳಿಸಿಕೊಳ್ಳಬೇಕು ಎಂಬ ಸುದೀರ್ಘ ವಿವರಣೆಯನ್ನೊಳಗೊಂಡ ಪತ್ರವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರಿಗೆ ಮೇಲ್ ಮಾಡಿದ್ದರು. ಸಂಜೆ ವೇಳೆಗೆ ಅವರಿಗೆ ಕ್ಷೇತ್ರವನ್ನು ಕಳೆದುಕೊಂಡ ಆಘಾತಕಾರಿ ಸುದ್ದಿ ಬಂದಿದೆ.
ಉಡುಪಿ -ಚಿಕ್ಕಮಗಳೂರು ಕ್ಷೇತ್ರ ಒಂದು ಕಾಲಕ್ಕೆ ಕಾಂಗ್ರೆಸ್ ಪಕ್ಷದ ಭದ್ರಕೋಟೆ. ಪಕ್ಷದ ಅಧ್ಯಕ್ಷೆಯಾಗಿದ್ದ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರವನ್ನು ಅಷ್ಟೇನು ಪ್ರಭಾವ ಇಲ್ಲದ ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದು ಸರಿಯಲ್ಲ ಎಂಬ ಭಾವನೆ ವ್ಯಕ್ತವಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಜೆಡಿಎಸ್ ಇರಬಹುದು. ಅದರೆ ಉಡುಪಿ ಜಿಲ್ಲೆಯಲ್ಲಿ ನೆಲೆಯೇ ಇಲ್ಲ. ಪಕ್ಷದ ವರಿಷ್ಠರ ನಿರ್ಧಾರದಿಂದ ಕಾಂಗ್ರೆಸ್‌ಗೆ ಹಾನಿಯೇ ಹೊರತು ಯಾವುದೇ ಲಾಭ ಇಲ್ಲ. ಭವಿಷ್ಯದ ದಿನಗಳಲ್ಲಿ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಬಿಜೆಪಿಯಲ್ಲಿ ಈ ಬಾರಿ ಒಗ್ಗಟ್ಟಿನ ಕೊರತೆ ಇತ್ತು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಅಲೆ ಇದೆ. ಹಲವರು ಬಹಿರಂಗವಾಗಿಯೇ ಅವರ ವಿರುದ್ಧ ಸಭೆ ನಡೆಸಿದ್ದು, ಅವರಿಗೆ ಟಿಕೆಟ್ ಕೊಡಬಾರದು ಎಂದು ಒತ್ತಡ ಹಾಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸಮರ್ಥರನ್ನು ಕಣಕ್ಕೆ ಇಳಿಸಿ ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಈ ಕ್ಷೇತ್ರವನ್ನು ಮತ್ತೆ ಬಿಜೆಪಿಯಿಂದ ಕೈವಶ ಮಾಡಿಕೊಳ್ಳಬಹುದಾಗಿತ್ತು ಎಂದು ಹೆಸರು ಹೇಳಲಿಚ್ಚಿಸದ ಕಾಂಗ್ರೆಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಹಾದಿ ಸುಗಮ: ಲೋಕಸಭಾ ಸದಸ್ಯೆ ಬಿಜೆಪಿಯ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಸಾಕಷ್ಟು ವಿರೋಧವಿದ್ದು, ಇದರ ರಾಜಕೀಯ ಲಾಭ ಪಡೆಯುವ ಸಾಕಷ್ಟು ಅವಕಾಶಗಳಿದ್ದವು. ಒಂದು ವೇಳೆ ಶೋಭಾ ಕರಂದ್ಲಾಜೆ ಅವರನ್ನೇ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದರೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್ ಬಾವುಟ ಹಾರಿಸುವ ಅವಕಾಶಗಳಿದ್ದವು. ಈ ಅವಕಾಶ ಬಳಕೆ ಮಾಡಿಕೊಳ್ಳಲು ಪಕ್ಷದ ವರಿಷ್ಠರು ಪ್ರಯತ್ನ ಮಾಡದೆ ಯಾವುದೋ ಲೆಕ್ಕಾಚಾರದಲ್ಲಿ ಜೆಡಿಎಸ್‌ಗೆ ಕ್ಷೇತ್ರ ಬಿಟ್ಟುಕೊಟ್ಟಿರುವುದು ಬಿಜೆಪಿಗೆ ಅನುಕೂಲ ಮಾಡಿಕೊಟ್ಟಂತಾಗಿದೆ ಎನ್ನುವ ಮಾತುಗಳು ಕೇಳಿಬಂದಿವೆ.

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಎನ್ನುವುದು ಮೈತ್ರಿಕೂಟದ ಉದ್ದೇಶ. ಆದರೆ ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಮೂಲಕ ಬಿಜೆಪಿಯ ಜಯದ ಹಾದಿಯನ್ನು ಹೆಚ್ಚೂ ಕಡಿಮೆ ಸುಗಮಗೊಳಿಸಿದಂತಾಗಿದೆ. ಇದು ಯಾವ ಪುರುಷಾರ್ಥಕ್ಕೆ ಎಂದು ಜಿಲ್ಲೆಯ ಕಾಂಗ್ರೆಸ್ ನಾಯಕರು ಪ್ರಶ್ನೆ ಮಾಡುತ್ತಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಯಾರು?: ಉಡುಪಿ ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದರಿಂದ ಅಭ್ಯರ್ಥಿ ಯಾರಾಗಬಹುದು ಎನ್ನುವ ಪ್ರಶ್ನೆ ಎದುರಾಗಿದೆ. ಬೋಜೇಗೌಡರೊಂದಿಗೆ ಬಿಜೆಪಿ ಮುಖಂಡ ಜಯಪ್ರಕಾಶ್ ಹೆಗ್ಡೆ ಅವರ ಹೆಸರೂ ಕೇಳಿ ಬಂದಿದೆ. ಸ್ಥಳೀಯವಾಗಿ ಬಿಜೆಪಿಗೆ ಸ್ಪರ್ಧೆ ನೀಡಬಲ್ಲ ಅಭ್ಯರ್ಥಿಗಳು ಕಾಣಿಸುತ್ತಿಲ್ಲ. ಉಡುಪಿ ಜಿಲ್ಲೆಯಿಂದಲೂ ಅಂತಹ ಅಭ್ಯರ್ಥಿಗಳಿಲ್ಲ.

ಜಯಪ್ರಕಾಶ್ ಹೆಗ್ಡೆ ಅವರು ಬಿಜೆಪಿ ಟಿಕೆಟ್‌ಗೆ ಪ್ರಯತ್ನ ನಡೆಸಿದ್ದು, ಅಲ್ಲಿ ಅವಕಾಶ ಸಿಗದಿದ್ದರೆ ಜೆಡಿಎಸ್‌ಗೆ ಕರೆತಂದು ಕಣಕ್ಕೆ ಇಳಿಸಬೇಕು ಎಂಬುದು ಕೆಲವು ಮುಖಂಡರ ಲೆಕ್ಕಾಚಾರ. ಆದರೆ ಇದು ಎಷ್ಟರಮಟ್ಟಿಗೆ ಫಲ ನೀಡಲಿದೆ. ವರಿಷ್ಠರು ಎಷ್ಟರ ಮಟ್ಟಿಗೆ ಒಪ್ಪಬಹುದು ಎನ್ನುವ ಪ್ರಶ್ನೆಗಳಿವೆ.

ಪಕ್ಷ ಬಿಡುವುದಿಲ್ಲ ಎಂದ ಹೆಗ್ಡೆ: ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಿಜ, ಒಂದು ವೇಳೆ ಅವಕಾಶ ಸಿಗದಿದ್ದರೆ ಪಕ್ಷ ಬಿಡುವುದಿಲ್ಲ ಎಂದು ಮಾಜಿ ಲೋಕಸಭಾ ಸದಸ್ಯ ಜಯಪ್ರಕಾಶ್ ಹೆಗ್ಡೆ ಫೇಸ್‌ಬುಕ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ. ಸ್ಪರ್ಧೆ ಮಾಡುವ ಅವಕಾಶ ಸಿಗದಿದ್ದರೆ ಬೇಜಾರಿಲ್ಲ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು ಎನ್ನುವುದು ನನ್ನ ಆಶಯ. ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ ಎಂದು ವಿವರಣೆ ನೀಡಿದ್ದಾರೆ. ಜೆಡಿಎಸ್‌ನಿಂದ ಕಣಕ್ಕೆ ಇಳಿಯುವ ವದಂತಿಗಳು ಎಲ್ಲೆಡೆ ಹರಡಿದ್ದು, ಈ ವದಂತಿಗಳಿಗೆ ಉತ್ತರ ಎನ್ನುವಂತೆ ಫೇಸ್‌ಬುಕ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯಲ್ಲಿ ಖುಷಿ: ಕ್ಷೇತ್ರಗಳ ಹಂಚಿಕೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ಪಾಲಾಗಿರುವುದು ಬಿಜೆಪಿಯಲ್ಲಿ ಸಂಭ್ರಮವನ್ನುಂಟು ಮಾಡಿದೆ. ಕಾಂಗ್ರೆಸ್‌ಗೆ ಈ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರೆ ತೀವ್ರ ಪೈಪೋಟಿ ಎದುರಿಸಬೇಕಾಗುತ್ತಿತ್ತು. ಮೈತ್ರಿಕೂಟದಲ್ಲಿನ ಸೀಟು ಹಂಚಿಕೆ ಸರ್ಕಸ್‌ನಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದು ನಮ್ಮ ಗೆಲುವನ್ನು ಸುಲಭ ಮಾಡಿದೆ ಎಂದು ಜಿಲ್ಲೆಯ ಬಿಜೆಪಿ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸಮರ್ಥನೆ ಏನು?: ಇಂದಿರಾ ಗಾಂಧಿಯವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರದಲ್ಲಿ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಸಾಧ್ಯವಾಗಲಿಲ್ಲ ಎಂದರೆ ವಿಶ್ವದಲ್ಲೇ ತಪ್ಪು ಸಂದೇಶ ರವಾನೆಯಾಗಲಿದೆ. ಇಂತಹ ನಿರ್ಧಾರವನ್ನು ಕೈಗೊಳ್ಳಬಾರದು ಎಂದು ವರಿಷ್ಠರಿಗೆ ಮನವಿ ಮಾಡಲು ಬುಧವಾರ ಬೆಳಗ್ಗೆ ನಡೆದ ಚಿಕ್ಕಮಗಳೂರು ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು.

ಉಡುಪಿ ಚಿಕ್ಕಮಗಳೂರು ಕ್ಷೇತ್ರ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳು ಅಧಿಕ ಸಂಖ್ಯೆಯಲ್ಲಿರುವ ಕ್ಷೇತ್ರಗಳಲ್ಲಿ ಒಂದು. ಈ ಕ್ಷೇತ್ರದಲ್ಲಿ ಜೆಡಿಎಸ್‌ಗೆ ನೆಲೆ ಇಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ 3.75 ಲಕ್ಷಕ್ಕೂ ಅಧಿಕ ಮತಗಳನ್ನು ಗಳಿಸಿದ್ದರೆ ಜೆಡಿಎಸ್ ಅಭ್ಯರ್ಥಿಗೆ ಬಿದ್ದಿರುವ ಮತಗಳು ಕೇವಲ 68 ಸಾವಿರ ಮಾತ್ರ. ಪರಿಸ್ಥಿತಿ ಹೀಗಿರುವಾಗ ಜೆಡಿಎಸ್‌ಗೆ ಈ ಕ್ಷೇತ್ರವನ್ನು ಬಿಟ್ಟುಕೊಡಬಾರದು. ಒಂದು ವೇಳೆ ಜೆಡಿಎಸ್‌ಗೆ ಬಿಟ್ಟುಕೊಡುವ ನಿರ್ಧಾರ ಮಾಡಿದರೆ ಮೈತ್ರಿಕೂಟಕ್ಕೆ ಒಂದು ಕ್ಷೇತ್ರ ನಷ್ಟವಾಗಲಿದೆ ಎಂದು ಅಭಿಪ್ರಾಯಪಡಲಾಗಿತ್ತು.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಒಮ್ಮೆಯೂ ಜೆಡಿಎಸ್ ಖಾತೆ ತೆರೆದಿಲ್ಲ. ಗೆಲ್ಲುವ ಸಾಮರ್ಥ್ಯವೂ ಇಲ್ಲ. ಹೀಗಾಗಿ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಬಾರದು ಎನ್ನುವ ತೀರ್ಮಾನ ಕೈಗೊಂಡು, ಕ್ಷೇತ್ರ ಉಳಿಸಿಕೊಳ್ಳಲು ಈ ಎಲ್ಲ ಸಮರ್ಥನೆಗಳೊಂದಿಗೆ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರಿಗೆ ಮೇಲ್ ಕಳುಹಿಸಲಾಗಿತ್ತು.

ಕಾಂಗ್ರೆಸ್ ನಾಯಕರಿಗೆ ನಿರಾಸೆ: ಕ್ಷೇತ್ರದಿಂದ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಮತ್ತು ಪ್ರಮೋದ್ ಮಧ್ವರಾಜ್ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಈ ಇಬ್ಬರಿಗೂ ಕ್ಷೇತ್ರ ಜೆಡಿಎಸ್ ಪಾಲಾಗಿರುವುದು ತೀವ್ರ ನಿರಾಸೆಯ ಸಂಗತಿ. ಆದರೆ ಈ ಬಗ್ಗೆ ತಕ್ಷಣದ ಪ್ರತಿಕ್ರಿಯೆ ಯಾರೂ ನೀಡುತ್ತಿಲ್ಲ. ಸೊರಕೆಯವರು ಇನ್ನೂ ಮಾಹಿತಿ ಸಿಕ್ಕಿಲ್ಲ ಎಂದು ಪ್ರತಿಕ್ರಿಯಿಸಿದರೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ದೂರವಾಣಿ ಕರೆಗೆ ಸ್ಪಂದಿಸುತ್ತಿಲ್ಲ.

ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಸ್ಥಾನ ಗೆಲ್ಲುವಲ್ಲಿ ಜೆಡಿಎಸ್-ಕಾಂಗ್ರೆಸ್ ಒಟ್ಟಾಗಿ ಕೆಲಸ ಮಾಡುತ್ತೇವೆ. ಇದರಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಜೆಡಿಎಸ್‌ನಲ್ಲಿ ಸೂಕ್ತ ಅಭ್ಯರ್ಥಿಯನ್ನೇ ಆಯ್ಕೆ ಮಾಡಿ ಹೈಕಮಾಂಡ್ ಟಿಕೆಟ್ ನೀಡಲಿದೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರು ಬದ್ಧ.
|ಯೋಗೀಶ್ ಶೆಟ್ಟಿ, ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇರುವುದರಿಂದ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲ ಕಾರ್ಯಕರ್ತರು, ನಾಯಕರು ಬದ್ಧರಾಗಿರಬೇಕಾಗುತ್ತದೆ. ಶಿವಮೊಗ್ಗ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾದ ಹಿನ್ನೆಲೆಯಲ್ಲಿ ಉತ್ತಮ ಮತಗಳನ್ನು ಪಡೆಯಲು ಸಾಧ್ಯವಾಗಿದ್ದು, ಕಡಿಮೆ ಅಂತರದಲ್ಲಿ ಬಿಜೆಪಿ ಗೆಲುವು ಸಾಧಿಸಲು ಕಾರಣವಾಯಿತು.
|ಪ್ರಮೋದ್ ಮಧ್ವರಾಜ್, ಕಾಂಗ್ರೆಸ್ ನಾಯಕ