ಬೆಂಗಳೂರು: ರಾಜ್ಯಾದ್ಯಂತ ಅನೇಕ ಕಡೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು ಕೆಲ ಕಡೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುತ್ತಿದೆ. ವಿಶೇಷವಾಗಿ ಕರಾವಳಿ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರುವ ಕಾರಣ ಈ ರೀತಿಯ ಬೆಳವಣಿಗೆಗಳು ಕಂಡು ಬರುತ್ತವೆ.
ಇದೀಗ ಭಾರಿ ಮಳೆ ಸುರಿಯುತ್ತಿರುವ ಕಾರಣ, ಉತ್ತರಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರಾವಳಿ ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಯಿಂದ ಕಾಲೇಜಿನವರೆಗೆ ರಜೆ ಘೋಷಿಸಲಾಗಿದೆ. ಈ ಕುರಿತಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಘೋಷಣೆ ಮಾಡಿದ್ದಾರೆ.
ಪದವಿ ಹಾಗೂ ಸ್ನಾತಕೋತ್ತರ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಇಲ್ಲವೇ?
ಪ್ರತಿ ಬಾರಿಯೂ ಕಾಲೇಜುಗಳಿಗೆ ರಜೆ ಎಂದಾಗ ಯಾವ ಕಾಲೇಜು ಎನ್ನುವ ಅನುಮಾನ ಅನೇಕ ವಿದ್ಯಾರ್ಥಿಗಳಲ್ಲಿ ಮೂಡುತ್ತದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ಬಾರಿ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಷ್ಟೇ ರಜೆಯನ್ನು ನೀಡಲಾಗಿದ್ದು, ಉಳಿದಂತೆ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಎಂದಿನಂತೆ ತರಗತಿಗೆ ತೆರಳಬೇಕಾಗಿರುತ್ತದೆ.