ಬೆಂಗಳೂರು: ಐಐಟಿ/ಐಐಎಂ/ಐಐಎಸ್‌ಸಿ/ಎನ್‌ಐಟಿ ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ(Incentive money) ವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಈ ನಿರ್ಧಾರ ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ(H C Mahadevappa) ತಿಳಿಸಿದ್ದಾರೆ.
ಪಿಯುಸಿ ಪರೀಕ್ಷೆಯಲ್ಲಿ 95 ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್‌ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂ.ಶುಲ್ಕ ಧನ ನೀಡಲು ಸರ್ಕಾರ ತೀರ್ಮಾನಿಸಿದೆ.
ಎಂಬಿಬಿಎಸ್ ಪದವಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ ಶೇ.60ಕ್ಕೂ ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾದರೆ ಅವರಿಗೆ ಮತ್ತೆ 25 ಲಕ್ಷ ರೂ. ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದು ಮಹದೇವಪ್ಪ ಹೇಳಿದ್ದಾರೆ.
ಕೋಟ್:
ಪ್ರಬುದ್ಧ ಯೋಜನೆಯಡಿ ವಿದೇಶಿ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿರುವ ನಮ್ಮ ಸರ್ಕಾರ ಇದೀಗ ಮಕ್ಕಳ ಉತ್ತಮ ಶಿಕ್ಷಣವನ್ನು ಗಮನದಲ್ಲಿಟುಕೊಂಡು ಈ ಪ್ರಮುಖ ಘೋಷಣೆ ಮಾಡಿದೆ.
-ಡಾ.ಎಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ