ಶಿವಮೊಗ್ಗ: ಕರ್ನಾಟಕದಲ್ಲಿ ಅಸಮರ್ಥ ಸರ್ಕಾರ ಆಡಳಿತದಲ್ಲಿದ್ದು ರಾಜ್ಯವನ್ನು ದಿವಾಳಿ ಅಂಚಿಗೆ ತಗೆದುಕೊಂಡು ಹೋಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.
ಮತ್ತೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗ ಯಾವುದೇ ಸಮಸ್ಯೆ ಇರಲಿಲ್ಲ. ಒಂದೇ ವರ್ಷದಲ್ಲಿ ಇವರ ಆಡಳಿತದಿಂದ ಆರ್ಥಿಕ ಸಂಕಷ್ಟಕ್ಕೆ ರಾಜ್ಯ ಸಿಲುಕಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ದೂರುವ ಚಾಳಿ ರೂಢಿಸಿಕೊಂಡಿದ್ದಾರೆ. ಪ್ರತಿಯೊಂದರ ದರ ಏರಿಕೆ ಮಾಡುತ್ತಿದ್ದು ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಇದನ್ನು ಆಡಳಿತ ಪಕ್ಷದ ನಾಯಕರೇ ಹೇಳುತ್ತಿದ್ದಾರೆ. ಜನಪರ ಆಡಳಿತ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅನುಭವಿ ಮುಖ್ಯಮಂತ್ರಿಗಳು ಇಂದು ಆಡಳಿತ ನಡೆಸಲು ಪರದಾಡುತ್ತಿದ್ದಾರೆ. ಇದರ ಮಧ್ಯೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ಮಾಡಿದ್ದಾರೆ. ಒಂದೆಡೆ ಭ್ರಷ್ಟಾಚಾರ ಇನ್ನೊಂದೆಡೆ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಜನಸಾಮಾನ್ಯರ ಪಾಲಿಗೆ ಸರ್ಕಾರ ಸತ್ತುಹೋಗಿದೆ. ಆರ್ಥಿಕ ಶಕ್ತಿ ಕೊಡುವ ಯೋಜನೆಯ ಹಣದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಹೋರಾಟ ಮಾಡುತ್ತೇವೆ. ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡದಿದ್ದರೆ ಜೂ.20ರಂದು ರಾಜ್ಯಾದ್ಯಂತ ರಸ್ತೆ ತಡೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಆಡಳಿತ ಪಕ್ಷದ ಶಾಸಕರು ಹತಾಶರಾಗಿದ್ದಾರೆ. ಆಡಳಿತ ಪಕ್ಷದ ಶಾಸಕರು ತಲೆ ಎತ್ತಿಕೊಂಡು ಓಡಾಡಲು ಆಗುತ್ತಿಲ್ಲ. ಸರ್ಕಾರ ಬಂದ ಮೇಲೆ ಎಷ್ಟು ಕಿ.ಮೀ. ರಸ್ತೆ ಮಾಡಿದ್ದಾರೆ? ಸರ್ಕಾರದ ಹಣ ಎಲ್ಲಿಗೆ ಹೋಗುತ್ತಿದೆ ಎಂದು ಪ್ರಶ್ನಿಸಿದ ಅವರು, ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ದೂರಿದರು.