More

  ಮಾದಪ್ಪನ ಸನ್ನಿಧಿಯಲ್ಲಿ ಭಕ್ತರ ಸಂಖ್ಯೆ ಹೆಚ್ಚಳ

  ಹನೂರು : ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ರಜಾ ಅವಧಿಯ ಹಿನ್ನೆಲೆ 3 ದಿನಗಳಿಂದ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಾಗಿದೆ.

  ಮಾದಪ್ಪನ ಸನ್ನಿಧಿಗೆ ಜಾತ್ರಾ ವೇಳೆ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಜತೆಗೆ ಸಾಮಾನ್ಯ ದಿನಗಳಲ್ಲೂ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆ ಆಗಮಿಸುವ ಭಕ್ತರ ಸಂಖ್ಯೆ ಕ್ಷೀಣಿಸಿತ್ತು. ಆದರೀಗ ಚುನಾವಣೆ ಮುಗಿದಿರುವುದರಿಂದ ಹಾಗೂ ಶಾಲಾ-ಕಾಲೇಜಿಗೆ ರಜೆ ಇರುವುದರಿಂದ ಪಾಲಕರು ಮಕ್ಕಳೊಂದಿಗೆ ಹಾಗೂ ಸರ್ಕಾರಿ ಅಧಿಕಾರಿಗಳು, ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಸನ್ನಿಧಿಗೆ ಭೇಟಿ ನೀಡುತ್ತಿದ್ದಾರೆ. ಕಳೆದ 3 ದಿನಗಳಿಂದ ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಅದರಲ್ಲೂ ಶಕ್ತಿ ಯೋಜನೆಯ ಪರಿಣಾಮ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಈ ದೆಸೆಯಲ್ಲಿ ಸೋಮವಾರ ದೇಗುಲದ ಆವರಣದಲ್ಲಿ ಸಾವಿರಾರು ಭಕ್ತರು ನೆರೆದಿದ್ದು, ವಿವಿಧ ಪೂಜಾ ಕಾರ್ಯಗಳಲ್ಲಿ ಭಾಗಿಯಾಗಿ ಸರತಿಯಲ್ಲಿ ದೇವರ ದರ್ಶನ ಪಡೆದರು.

  ಹರಕೆ ಹೊತ್ತ ಭಕ್ತರು ಹುಲಿವಾಹನ, ರುದ್ರಾಕ್ಷಿವಾಹನ ಹಾಗೂ ಬಸವ ವಾಹನವನ್ನು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿಸುವುದರ ಮೂಲಕ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಈ ಉತ್ಸವಗಳು ಬೆಳಗ್ಗೆಯಿಂದ ಸಂಜೆಯವರೆಗೆ ನಡೆದವು. ಭಕ್ತರು ದಂಡಿನ ಕೋಲನ್ನು ಹೊತ್ತು ಉತ್ಸವ ಮೂರ್ತಿಗಳಿಗೆ ಧನ, ಧಾನ್ಯ ಸೇರಿದಂತೆ ಇನ್ನಿತರ ವಸ್ತುಗಳನ್ನು ಎಸೆದು ದೇವರ ಕೃಪೆಗೆ ಪಾತ್ರರಾದರದರು. ಇನ್ನು ಹರಕೆ ಹೊತ್ತ ಕೆಲವರು ಮುಡಿಸೇವೆ, ಉರುಳುಸೇವೆ, ಪಂಜಿನಸೇವೆ ಹಾಗೂ ರಜಾ ಹೊಡೆಯುವ ಸೇವೆ (ದೇವಸ್ಥಾನದ ಸುತ್ತ ಕಸ ತೆಗೆಯುವ ಕಾರ್ಯ) ಕೈಗೊಳ್ಳುವುದರ ಮೂಲಕ ತಮ್ಮ ಹರಕೆಯನ್ನು ತೀರಿಸಿದರು. ಚಾಮರಾಜನಗರ ಸೇರಿದಂತೆ ಮೈಸೂರು, ಬೆಂಗಳೂರು, ಬಿಡದಿ, ರಾಮನಗರ, ಕನಕಪುರ, ಚನ್ನಪಟ್ಟಣ, ಮದ್ದೂರು, ಮಳವಳ್ಳಿ ಹಾಗೂ ಮಂಡ್ಯ ಕಡೆಗಳಿಂದ ಹೆಚ್ಚಿನ ಭಕ್ತರು ಆಗಮಿಸಿದ್ದರು.

  See also  ಕಲಾವಿದರಿಗೆ ಬಂದಿಲ್ಲ ಗೌರವಧನ

  ಕಳೆದ 3 ದಿನಗಳಿಂದ ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಪ್ರಾಧಿಕಾರದ ವತಿಯಿಂದ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುತ್ತಿದೆ. ಅನ್ನ ದಾಸೋಹದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಲಾಗುತ್ತಿದೆ. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
  ಎ.ಈ.ರಘು
  ಕಾರ್ಯದರ್ಶಿ, ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮ.ಬೆಟ್ಟ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts