

IND vs AUS : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ದಿನಾಂಕ ನಿಗದಿಯಾಗಿದೆ. ಭಾನುವಾರ ಪರ್ತ್‌ನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ. ಟೀಮ್ ಇಂಡಿಯಾವನ್ನು ಶುಭಮಾನ್ ಗಿಲ್ ಮುನ್ನಡೆಸಿದರೆ, ಆಸ್ಟ್ರೇಲಿಯಾವನ್ನು ಮಿಚೆಲ್ ಮಾರ್ಷ್ ಮುನ್ನಡೆಸಲಿದ್ದಾರೆ.
ಇದೀಗ ಭಾರತದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಸುಮಾರು ಏಳು ತಿಂಗಳ ನಂತರ ಇಬ್ಬರೂ ನೀಲಿ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋ-ಕೊ ಜೋಡಿ ಹೇಗೆ ಆಡುತ್ತದೆ ಎಂಬುದನ್ನು ನೋಡಲು ಜನರು ಕಾತರದಿಂದ ಕಾಯುತ್ತಿದ್ದಾರೆ. ಇದರ ನಡುವೆ ಟೀಮ್ ಇಂಡಿಯಾ ಅಭಿಮಾನಿಗಳಿಗೆ ಒಂದು ಬೇಸರದ ಸುದ್ದಿ ಹೊರಬಿದ್ದಿದೆ.
ಬೇಸರದ ಸುದ್ದಿ ಏನೆಂದರೆ, ಪರ್ತ್‌ನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಭಾರತೀಯ ಕಾಲಮಾನ ಭಾನುವಾರ ಬೆಳಗ್ಗೆ 9 ಗಂಟೆಗೆ ಪಂದ್ಯ ಆರಂಭವಾಗಲಿದೆ. ಪಂದ್ಯದ ಸಮಯದಲ್ಲಿ ಹಲವಾರು ಬಾರಿ ಮಳೆಯಿಂದಾಗಿ ಆಟಕ್ಕೆ ಅಡ್ಡಿಯಾಗುವ ಸಾಧ್ಯತೆಯಿದೆ. ಅಂದಹಾಗೆ, ಮಳೆಯಾಗುವ ಸಾಧ್ಯತೆ ಶೇ. 35 ಕ್ಕಿಂತ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಬಹಿರಂಗಪಡಿಸಿದೆ. ಶನಿವಾರವೂ ಅಲ್ಲಿ ಲಘು ಮಳೆಯಾಗಿದೆ.
ಆದಾಗ್ಯೂ, ಮಳೆಯಿಂದಾಗಿ ಪಂದ್ಯ ಸಂಪೂರ್ಣವಾಗಿ ರದ್ದಾಗುವ ಯಾವುದೇ ಲಕ್ಷಣಗಳಿಲ್ಲ. ಈ ಹವಾಮಾನ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ಟಾಸ್ ನಿರ್ಣಾಯಕವಾಗಿರುತ್ತದೆ. ಟಾಸ್ ಗೆದ್ದವರು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಕ್ರಿಕೆಟ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಪರ್ತ್ ಕ್ರೀಡಾಂಗಣದ ಪಿಚ್ ವೇಗದ ಬೌಲರ್‌ಗಳಿಗೆ ಸ್ವರ್ಗವಾಗಿದೆ. ಆದ್ದರಿಂದ, ಭಾರತವು ಮೂವರು ವೇಗಿಗಳು ಮತ್ತು ಇಬ್ಬರು ಸ್ಪಿನ್ನರ್‌ಗಳೊಂದಿಗೆ ಪಂದ್ಯವನ್ನು ಪ್ರಾರಂಭಿಸುವ ಸಾಧ್ಯತೆ ಇದೆ.
ರೋಹಿತ್ ಶರ್ಮ, ಶುಭಮಾನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್ ಹಾಗೂ ಅರ್ಷದೀಪ್ ಸಿಂಗ್.