

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ 45ನೇ ಪಂದ್ಯ ಹಾಗೂ ಉಭಯ ತಂಡಗಳ ಗ್ರೂಪ್ ಹಂತದ ಕೊನೆಯ ಪಂದ್ಯದಲ್ಲಿ ಬ್ಯಾಟರ್ಗಳು ಸುರಿಸಿದ ರನ್ ಮಳೆಯಿಂದಾಗಿ ಆತಿಥೇಯ ಭಾರತ ಎದುರಾಳಿ ನೆದರ್ಲೆಂಡ್ಸ್ ತಂಡಕ್ಕೆ ಬೃಹತ್ ಮೊತ್ತದ ಗುರಿ ನೀಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ನಿಗದಿತ 50 ಓವರ್ಗಳಲ್ಲಿ ಕೇವಲ 4 ವಿಕೆಟ್ ನಷ್ಟಕ್ಕೆ 410 ರನ್ಗಳು ಬೃಹತ್ ಮೊತ್ತವನ್ನು ಕಲೆ ಹಾಕಿತು. ಬ್ಯಾಟ್ ಹಿಡಿದು ಕ್ರೀಡಾಂಗಣಕ್ಕಿಳಿದ ಟೀಮ್ ಇಂಡಿಯಾದ ಪ್ರತಿ ಬ್ಯಾಟರ್ಗಳು ಸಹ ರನ್ ಮಾರುತವನ್ನೇ ಸೃಷ್ಟಿಸಿದರು. ರೋಹಿತ್ ಶರ್ಮ (61 ರನ್, 54 ಎಸೆತ, 8 ಬೌಂಡರಿ, 2 ಸಿಕ್ಸರ್) ಮತ್ತು ಶುಭಮಾನ್ ಗಿಲ್ (51 ರನ್, 32 ಎಸೆತ, 3 ಬೌಂಡರಿ, 4 ಸಿಕ್ಟರ್) 100 ರನ್ಗಳ ಜತೆಯಾಟದ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಹಿಡಿದು ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ಸಹ ನೆದರ್ಲೆಂಡ್ಸ್ ಬೌಲರ್ಗಳನ್ನು ಕಾಡಿದರು. 56 ಎಸೆತಗಳನ್ನು ಎದುರಿಸಿದ ಕೊಹ್ಲಿ 5 ಬೌಂಡರಿ 1 ಸಿಕ್ಸರ್ ನೆರವಿನಿಂದ 51 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಶ್ರೇಯಸ್-ರಾಹುಲ್ ಜುಗಲ್ಬಂಧಿ ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್ಗೆ ಇಳಿದ ಶ್ರೇಯಸ್ ಅಯ್ಯರ್ ( ಅಜೇಯ 128 ರನ್, 94 ಎಸೆತ, 10 ಬೌಂಡರಿ, 5 ಸಿಕ್ಸರ್) ಮತ್ತು ಐದನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆ.ಎಲ್. ರಾಹುಲ್ (102 ರನ್, 64 ಎಸೆತ, 11 ಬೌಂಡರಿ, 4 ಸಿಕ್ಸರ್) ದ್ವಿಶತಕದ ಜತೆಯಾಟದೊಂದಿಗೆ ಉತ್ತಮ ಇನಿಂಗ್ಸ್ ಆಡಿದರು. ನೆದರ್ಲೆಂಡ್ಸ್ ಬೌಲರ್ಗಳನ್ನು ಅಕ್ಷರಶಃ ಬೆಂಡತ್ತಿದ ಈ ಜೋಡಿ ಎರಡು ವೈಯಕ್ತಿಕ ಶತಕಗಳೊಂದಿಗೆ ಭಾರತ ತಂಡ 410 ರನ್ಗಳ ಬೃಹತ್ ಮೊತ್ತವನ್ನು ದಾಖಲಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಕೊನೆಯಲ್ಲಿ ಸೂರ್ಯಕುಮಾರ್ ಯಾದವ್ 2 ರನ್ ಗಳಿಸಿ ಅಜೇಯರಾಗಿ ಉಳಿದರು.
ನೆದರ್ಲೆಂಡ್ಸ್ ಪರ ಬಾಸ್ ಡಿ ಲೀಡೆ ಎರಡು ವಿಕೆಟ್ ಪಡೆದರೆ, ಪೌಲ್ ವ್ಯಾನ್ ಮೀಕೆರೆನ್ ಮತ್ತು ರೋಲೋಫ್ ವ್ಯಾನ್ ಡೆರ್ ಮೆರ್ವೆ ತಲಾ ಒಂದೊಂದು ವಿಕೆಟ್ ಕಬಳಿಸಿದರು. ಆದರೆ, ಯಾರೊಬ್ಬರು ಸಹ ಟೀಮ್ ಇಂಡಿಯಾ ಬ್ಯಾಟರ್ಗಳಿಗೆ ಸವಾಲಾಗಲೇ ಇಲ್ಲ.
ಸೆಮೀಸ್ನಲ್ಲಿ ಮುಖಾಮುಖಿಯಾಗುವ ತಂಡಗಳು
ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಸಮೀಸ್ ಪ್ರವೇಶ ಪಡೆದಿದ್ದು, ನವೆಂಬರ್ 15ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಸಮಿಫೈನಲ್ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತ ಮತ್ತು ನಾಲ್ಕನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ನ.16ರಂದು ಕೋಲ್ಕತದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸಮಿಫೈನಲ್ನಲ್ಲಿ ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಮತ್ತು ಮೂರನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ.
ನ.19ಕ್ಕೆ ವಿಶ್ವಕಪ್ ಹಬ್ಬಕ್ಕೆ ವಿದ್ಯುಕ್ತ ತೆರೆ
ಎರಡೂ ಸಮಿಫೈನಲ್ಗಳಲ್ಲಿ ಗೆಲ್ಲುವ ತಂಡಗಳು ನ. 19ರಂದು ಗುಜರಾತಿನ ಅಹಮದಾಬಾದ್ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟ್ರೋಫಿಗಾಗಿ ನಡೆಯಲಿರುವ ಅಂತಿಮ ಹಾಗೂ ಫೈನಲ್ ಪಂದ್ಯದಲ್ಲಿ ಸೆಣಸಾಡಲಿದ್ದು, ಗೆಲ್ಲುವ ತಂಡ ವಿಶ್ವಕಪ್ ಟ್ರೋಫಿಯ ಜತೆಗೆ 4 ಮಿಲಿಯನ್ ಡಾಲರ್ (33,30,89,400 ರೂಪಾಯಿ) ಬಹುಮಾನ ಮೊತ್ತವನ್ನು ಪಡೆಯಲಿದೆ. ರನ್ನರ್ ಅಪ್ ತಂಡಗಳು 2 ಮಿಲಿಯನ್ ಡಾಲರ್ ಬಹುಮಾನ ಮೊತ್ತ ಹಾಗೂ ಲೀಗ್ ಹಂತದಲ್ಲಿ ವಿಜೇತರಾದ ಪ್ರತಿ ತಂಡಕ್ಕೆ ತಲಾ 40 ಸಾವಿರ ಡಾಲರ್ ಬಹುಮಾನ ಮೊತ್ತವನ್ನು ಪಡೆಯಲಿವೆ. (ಏಜೆನ್ಸೀಸ್)