More

    ತಪಾಸಣೆ, ಲಸಿಕೆ ಹೆಚ್ಚಳಕ್ಕೆ ಕ್ರಮ, ಮುಖ್ಯಮಂತ್ರಿ ಸೂಚನೆ

    ಮಂಗಳೂರು/ಉಡುಪಿ: ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುವ ತನಕ ಹೆಚ್ಚಿನ ತಪಾಸಣೆಗಳನ್ನು ಕೈಗೊಳ್ಳುವಂತೆ ಹಾಗೂ ಲಸಿಕೆ ವಿತರಣೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

    ಕೋವಿಡ್-19 ಸೋಂಕಿನ ನಿಯಂತ್ರಣ ಕುರಿತು ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಪಂ ಸಿಇಒ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಜತೆ ಸಿಎಂ ಶನಿವಾರ ಬೆಂಗಳೂರಿನಿಂದ ವಿಡಿಯೋ ಸಂವಾದ ನಡೆಸಿದರು. ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹಾಗೂ ಉಡುಪಿ ಜಿಲ್ಲಾಧಿಕಾರಿ ಎಂ. ಕೂರ್ಮಾ ರಾವ್ ಪಾಲ್ಗೊಂಡಿದ್ದರು.

    ದ.ಕ. ಜಿಲ್ಲೆಯ ಗಡಿಭಾಗ, ನಗರ ಪ್ರದೇಶಗಳಲ್ಲಿ ಹೆಚ್ಚಿನ ಕೋವಿಡ್ ತಪಾಸಣೆ ಮಾಡಬೇಕು, ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆಗಳನ್ನು ನೀಡಬೇಕು. ಕರೊನಾ ಸೂಚ್ಯಂಕ ಇಳಿಕೆ ಮಾಡುವಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ಜಾರಿಯಲ್ಲಿದ್ದು, ಸರ್ಕಾರದ ಮುಂದಿನ ಆದೇಶದವರೆಗೂ ಸಾರ್ವಜನಿಕರು ಕಡ್ಡಾಯವಾಗಿ ಈ ನಿರ್ದೇಶನಗಳನ್ನು ಪಾಲಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸಿಎಂ ತಿಳಿಸಿದರು.

    ಕರ್ಫ್ಯೂ ಉಲ್ಲಂಘಿಸಿದರೆ ಕ್ರಮ: ಆಯಾ ದಿನಗಳಂದು ಹಂಚಿಕೆಯಾಗುವ ಲಸಿಕೆಗಳನ್ನು ಅದೇ ದಿನ ನೀಡಬೇಕು, ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಕಂದಾಯ, ರೈಲ್ವೆ, ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳು ಹೆಚ್ಚಿನ ಗಮನಹರಿಸಿ ಸಹಕರಿಸಬೇಕು. ಜಿಲ್ಲಾಡಳಿತ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ತಾಕೀತು ಮಾಡಿದರು.

    ದ.ಕ. ಜಿಲ್ಲೆಯಿಂದ ಜಿಪಂ ಸಿಇಒ ಡಾ. ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕಿಶೋರ್ ಭಾಗವಹಿಸಿದ್ದರು.

    ಉಡುಪಿ ಜಿಲ್ಲೆಯಿಂದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಪಂ ಸಿಇಒ ಡಾ.ನವೀನ್ ಭಟ್, ಡಿಎಚ್‌ಒ ಡಾ. ನಾಗಭೂಷಣ ಉಡುಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಮಧುಸೂದನ ನಾಯಕ್, ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ್ ಭಟ್, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಸಹಾಯಕ ಆಯುಕ್ತ ರಾಜು ಉಪಸ್ಥಿತರಿದ್ದರು.

    ಪ್ರಾಥಮಿಕ ಸಂಪರ್ಕಿತರ ಪತ್ತೆ: ಜಿಲ್ಲೆಯಲ್ಲಿ 2,240 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.70ರಷ್ಟು ಸೋಂಕಿತರು ಹೋಂ ಐಸೋಲೇಷನ್‌ನಲ್ಲಿದ್ದಾರೆ ಹಾಗೂ ಶೇ.30ರಷ್ಟು ಆಸ್ಪತ್ರೆ ಸಹಿತ ವಿವಿಧ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ. ಕೆ.ವಿ. ಮಾಹಿತಿ ನೀಡಿದರು.
    ಕೋವಿಡ್ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಲಾಗುತ್ತಿದೆ. ಜಿಲ್ಲೆಯ ಎಲ್ಲ ತಾಲೂಕುಗಳ ವೈದ್ಯಾಧಿಕಾರಿಗಳು, ಪಿಡಿಒಗಳು, ಗ್ರಾಮ ಸಹಾಯಕರು ಹಾಗೂ ಇತರ ಅಧಿಕಾರಿಗಳು ಕೋವಿಡ್ ನಿಯಂತ್ರಣದಲ್ಲಿ ಮುಂಚೂಣಿಯಲ್ಲಿದ್ದು, ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

    10 ಸಾವಿರ ದೈನಂದಿನ ಟೆಸ್ಟ್: ದಕ್ಷಿಣ ಕನ್ನಡಕ್ಕೆ ಉಡುಪಿ ಜಿಲ್ಲೆ ಹೊಂದಿಕೊಂಡಿರುವುದರಿಂದ ಕೋವಿಡ್ ಸ್ಥಿತಿಗತಿ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಹಾಗೂ ದೈನಂದಿನ ಪರೀಕ್ಷೆಯನ್ನು 10 ಸಾವಿರಕ್ಕೆ ಹೆಚ್ಚಿಸಬೇಕು. ಜೊತೆಗೆ ಲಸಿಕೆ ವಿಚಾರಣೆಗೆ ವೇಗ ನೀಡಬೇಕು ಎಂದು ಸಿಎಂ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕೂರ್ಮಾ ರಾವ್ ಮಾತನಾಡಿ, ಜಿಲ್ಲೆಯಲ್ಲಿ ದೈನಂದಿನ ಕೋವಿಡ್ ಪರೀಕ್ಷೆಗೆ 10 ಸಾವಿರ ಗುರಿ ನಿಗದಿ ಮಾಡಲಾಗಿದೆ. ಶೇ.80ರಷ್ಟು ಮಂದಿಗೆ ಪ್ರಥಮ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts