More

    ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ

    ಗದಗ: ಕೋವಿಡ್ ಸೋಂಕಿನ 2ನೇ ಅಲೆ ಅಧಿಕ ಪ್ರಮಾಣದಲ್ಲಿ ಹರಡುತ್ತಿದ್ದು, ಸೋಂಕು ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಈಗಾಗಲೇ ಆರಂಭಿಸಿರುವ ಕೋವಿಡ್ ಕೇರ್ ಸೆಂಟರ್​ಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಬೇಕು. ಅಗತ್ಯಕ್ಕನುಸಾರವಾಗಿ ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್​ಗಳನ್ನು ಸ್ಥಾಪಿಸಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ಹೇಳಿದರು.

    ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಕೋವಿಡ್ ಸೋಂಕು ನಿಯಂತ್ರಣ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ವಿಡಿಯೋ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು. ‘ಗ್ರಾಮೀಣ ಭಾಗದ ಕೋವಿಡ್ ಸೋಂಕಿತರನ್ನು ಹತ್ತಿರದ ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಿ ಸೂಕ್ತ ಚಿಕಿತ್ಸೆಗೆ ಕ್ರಮ ಜರುಗಿಸಬೇಕು’ ಎಂದರು.

    ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. ಹೆಚ್ಚುವರಿಯಾಗಿ ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಇಲಾಖೆಯ ಆಯ್ದ ಹಾಸ್ಟೆಲ್​ಗಳನ್ನು ಕೋವಿಡ್ ಕೇರ್ ಸೆಂಟರ್​ಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕೇಂದ್ರಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳೆಂದು ನೇಮಿಸಲಾಗಿದೆ. ತಹಸೀಲ್ದಾರರು, ತಾಪಂ ಇಒಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳು ಭೇಟಿ ನೀಡಿ ಅಲ್ಲಿರುವ ವ್ಯವಸ್ಥೆ, ಚಿಕಿತ್ಸೆ, ಔಷಧ ಲಭ್ಯತೆ ಕುರಿತು ಗಮನ ಹರಿಸಬೇಕು. ಕೋವಿಡ್ ಚಿಕಿತ್ಸೆ ಪಡೆಯುತ್ತಿರುವವರ ಬಗ್ಗೆ ದೈನಂದಿನ ವರದಿಯನ್ನು ಪಿಎಚ್​ಸಿಯ ಆರೋಗ್ಯಾಧಿಕಾರಿಗಳು ನೀಡಬೇಕು. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಟಾಸ್ಕ್ ಫೋರ್ಸ್ ಅನುಷ್ಠಾನ ಮಾಡಿ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಹಭಾಗಿತ್ವ ಬಹಳ ಮುಖ್ಯವಾಗಿದೆ ಎಂದು ಹೇಳಿದರು.

    ಗ್ರಾಮೀಣ ಭಾಗದಲ್ಲಿನ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್​ಗೆ ವಾಹನಗಳ ಮೂಲಕ ಸ್ಥಳಾಂತರಿಸುವಲ್ಲಿ ಸ್ಥಳೀಯ ಪಂಚಾಯಿತಿ ಟಾಸ್​ಫೋರ್ಸ್, ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸಬೇಕು. ತಾಲೂಕು ಆಸ್ಪತ್ರೆಗಳಲ್ಲಿ ಸೋಂಕಿನ ಚಿಕಿತ್ಸೆಗಾಗಿ ಅಗತ್ಯವಿರುವ ಔಷಧ ಸಲಕರಣೆಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಆಸ್ಪತ್ರೆಯ ಶುಚಿತ್ವದೆಡೆಗೆ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಬೇಕು. ಸೋಂಕಿತರಿಗೆ ಸೂಕ್ತ ಹಾಸಿಗೆ, ಬಿಸಿ ನೀರು, ಬಿಸಿ ಆಹಾರ ಪೂರೈಕೆಯಾಗುತ್ತಿರುವ ಕುರಿತು ಕ್ರಮ ವಹಿಸಬೇಕು ಎಂದು ತಿಳಿಸಿದರು.

    ಜಿಪಂ ಸಿಇಒ ಭರತ್ ಎಸ್., ಅಪರ ಜಿಲ್ಲಾಧಿಕಾರಿ ಸತೀಶಕುಮಾರ, ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರೀಗಿಡದ, ಡಾ. ಬಿ.ಎಂ. ಗೊಜನೂರ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಮೇಶ ಜಾಧವ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts