ಆದರ್ಶ ವ್ಯಕ್ತಿಗಳು ಮಾದರಿಯಾಗಲಿ

ಜಮಖಂಡಿ: ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬೆಳೆದವರನ್ನು ಮಾದರಿಯನ್ನಾಗಿಟ್ಟುಕೊಂಡು ಗುರಿ ಸಾಧಿಸಬೇಕು. ಗುರಿ ಮತ್ತು ಗುರು ನಿರ್ದಿಷ್ಟವಾಗಿರಬೇಕು ಎಂದು ಕರ್ನಾಟಕ ವಿವಿ ಪ್ರಾಧ್ಯಾಫಕ ಡಾ. ಐ.ಕೆ. ಪತ್ತಾರ ಹೇಳಿದರು.

ನಗರದ ಬಿಎಲ್‌ಡಿಇ ಸಂಸ್ಥೆಯ ವಾಣಿಜ್ಯ ಬಿಎಚ್‌ಎಸ್ ಕಲೆ ಮತ್ತು ಟಿಜಿಪಿ ವಿಜ್ಞಾನ ಕಾಲೇಜಿನ ಸ್ನಾತಕೋತ್ತರ ವಿಭಾಗಗಳ ವಾರ್ಷಿಕೋತ್ಸವ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಅವರು ಮಾತನಾಡಿದರು. ಸಿಕ್ಕ ಸಮಯ ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು ಎಂದರು.

ಇಂದು ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಕಡಿಮೆಯಾಗಿ ವಾಣಿಜ್ಯ, ಕಲೆ, ವಿಜ್ಞಾನ ವಿಭಾಗಕ್ಕೆ ಹೆಚ್ಚಿನ ಮಹತ್ವ ಬಂದಿದೆ. ಒಂದೊಂದು ಕಾಲಘಟ್ಟದಲ್ಲಿ ಒಂದೊಂದು ವಿಷಯ ಮಹತ್ವ ಪಡೆದುಕೊಳ್ಳುತ್ತಿದೆ ಎಂದ ಅವರು, ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳು ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವುದು ಕಳವಳಕಾರಿ ಸಂಗತಿ ಎಂದರು.

ಬಿಎಲ್‌ಡಿಇ ಕಾಲೇಜಿನ ಪ್ರಾಚಾರ್ಯ ಡಾ.ಎಂ.ಬಿ. ಮೂಲಿಮನಿ, ಕಾನಿಪ ತಾಲೂಕು ಅಧ್ಯಕ್ಷ ಶಿವಾನಂದ ಕೊಣ್ಣೂರ ಮಾತನಾಡಿದರು. ವಿದ್ಯಾರ್ಥಿಗಳು ಅನಿಸಿಕೆ ಹಂಚಿಕೊಂಡರು.

ಸ್ನಾತಕೋತ್ತರ ವಿಷಯಗಳಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.

ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ನಿರ್ದೇಶಕ ಡಾ.ಬಿ.ಎಂ. ನುಚ್ಚಿ ಸ್ವಾಗತಿಸಿದರು ಡಾ. ಎಂ.ಎಸ್. ಪಾಟೀಲ, ಡಾ. ಎಸ್.ಎಂ. ಬಿಜಾಪುರ ಪರಿಚಯಿಸಿದರು. ಭಾಗ್ಯಶ್ರೀ ಕಮಲದಿನ್ನಿ ನಿರೂಪಿಸಿದರು. ಪ್ರಾಧ್ಯಾಪಕ ಎ.ಬಿ. ಉಮದಿ ವಂದಿಸಿದರು.