ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಮತ್ತು ಲೋಕಾಯುಕ್ತ ಐಜಿಪಿ ಎಂ ಚಂದ್ರಶೇಖರ್ ನಡುವಿನ ಸಂಘರ್ಷ ತಾರಕಕ್ಕೆ ಏರುತ್ತಿದೆ. ಈ ನಡುವೆ ಐಪಿಎಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಭಾರೀ ಪ್ರತಿಭಟನೆ JDS Protest ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಮುಡಾ ಹಗರಣ: ಸಿಎಂ ಪತ್ನಿ ವಾಪಸ್ ನೀಡಿದ್ದ 14 ನಿವೇಶನಗಳ ಖಾತೆ ರದ್ದು!
ಪಕ್ಷದ ರಾಜ್ಯ ಕಚೇರಿ ಮುಂಭಾಗದಲ್ಲಿ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜವರಾಯಿ ಗೌಡ, ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಸೇರಿದಂತೆ ಅನೇಕ ನಾಯಕರು, ನೂರಾರು ಕಾರ್ಯಕರ್ತರು ಭಾಗವಹಿಸಿ ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ, ಓರ್ವ ಅಧಿಕಾರಿಯಾಗಿ ಚಂದ್ರಶೇಖರ್ ಅವರು ಕೇಂದ್ರ ಸಚಿವರ ಬಗ್ಗೆ ಬಳಕೆ ಮಾಡಿರುವ ಭಾಷೆ ಸರಿ ಇಲ್ಲ. ಅದಕ್ಕೆ ಕ್ಷಮೆ ಕೇಳಬೇಕು ಹಾಗೂ ಅವರ ಶಿಸ್ತು ಜರುಗಿಸಬೇಕು ಎಂದು ಒತ್ತಾಯ ಮಾಡಿದರು. ಅವರ ಹೇಳಿಕೆಯಿಂದ ಎಚ್.ಡಿ ಕುಮಾರಸ್ವಾಮಿ ಅವರ ಅಭಿಮಾನಿಗಳು ಹಾಗೂ ಅಸಂಖ್ಯಾತ ಜೆಡಿಎಸ್ ಕಾರ್ಯಕರ್ತರ ಭಾವನೆಗಳಿಗೆ ಘಾಸಿ ಉಂಟಾಗಿದೆ. ಕಾಂಗ್ರೆಸ್ ಸರ್ಕಾರ ನಮ್ಮ ನಾಯಕರ ವಿರುದ್ಧ ಅಧಿಕಾರಿಗಳನ್ನು ಎತ್ತಿ ಕಟ್ಟುತ್ತಿದೆ ಎಂದು ದೂರಿದರು.
ಈ ಸಂದರ್ಭದಲ್ಲಿ ಕಾರ್ಯಕರ್ತರು ಪಕ್ಷದ ಕಚೇರಿಯಲ್ಲಿ ಮುಖ್ಯರತೆಯವರೆಗೂ ಮೆರವಣಿಗೆ ನಡೆಸಿ ಅಧಿಕಾರಿ ಚಂದ್ರಶೇಖರ್ ವಿರುದ್ಧ ಧಿಕ್ಕಾರ ಕೂಗಿದರು ಹಾಗೂ ಅಧಿಕಾರಿ ಕೂಡಲೇ ಕೇಂದ್ರ ಸಚಿವರ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು. ಒಂದು ವೇಳೆ ಕ್ಷಮೆ ಕೇಳದಿದ್ದರೆ ನಗರದ ಎಲ್ಲೆಡೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಹಾಗೂ ಮುಂದೆ ಆಗಬಹುದಾದ ಪರಿಣಾಮಗಳಿಗೆ ಸರಕಾರವೇ ಹೊಣೆ ಆಗಬೇಕಾಗುತ್ತದೆ ಎಚ್ಚರಿಕೆ ಕೊಟ್ಟರು.
ಚಂದ್ರಶೇಖರ್ ವಿರುದ್ದ ಎಚ್ಡಿಕೆ ಗಂಭೀರ ಆರೋಪ
ಪಿಎಸಿಎಲ್ ಕಂಪನಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಎಚ್ ಡಿ ಕುಮಾರಸ್ವಾಮಿ ಲೋಕಾಯುಕ್ತ ಎಸ್ ಐ ಟಿ ಎಂ ಚಂದ್ರಶೇಖರ್ ವಿರುದ್ಧ ಗಂಭೀರ ಸ್ವರೂಪದ ಆರೋಪ ಮಾಡಿದ್ದರು. ಪಿಎಸಿಎಲ್ ಕಂಪನಿಗೆ ಬೆದರಿಸಿ ನೂರು ಕೋಟಿ ವಸೂಲಿ ಮಾಡಿದ ಪ್ರಕರಣದ ಆರೋಪಿಗಳಿಗೆ ಎಂ ಚಂದ್ರಶೇಖರ್ ಸಾಥ್ ನೀಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.
ಚಂದ್ರಶೇಖರ್ ಹೇಳಿದ್ದೇನು?
ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಎಂ ಚಂದ್ರಶೇಖರ್ ಬರೆದ ಪತ್ರದಲ್ಲಿ ನಾಟಕಗಾರ ಹಾಗೂ ವಿಮರ್ಶಕ ಬರ್ನಾಡ್ ಶಾ ಹೇಳಿಕೆಯನ್ನು ಉಲ್ಲೇಖಿಸಿ ಹಂದಿಗಳ ಜೊತೆಗೆ ಕುಸ್ತಿ ಮಾಡಬಾರದು ಎಂದು ಹೇಳಿದ್ದರು.
ಐಜಿಪಿ ಪತ್ರದಲ್ಲಿ ಉಲ್ಲೇಖ ಮಾಡಿರುವ ಹೇಳಿಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಮಾಡಿದ ಅವಮಾನ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ದೂರನ್ನು ನೀಡಿದ್ದಾರೆ.
ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ಎಸ್‌ಐಟಿ ತನಿಖೆಗೆ ತಾತ್ಕಾಲಿಕ ತಡೆ: ಆಂಧ್ರ ಡಿಜಿಪಿ