ಹುಬ್ಬಳ್ಳಿ : ಲೋಕಸಭೆ ಚುನಾವಣೆಯಲ್ಲಿ ಬಹುದೊಡ್ಡ ಮತಗಳ ಅಂತರದಿಂದ ಗೆಲ್ಲುವುದಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಗಿಂತ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗುತ್ತೇನೆ. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲೂ ಮತದಾರರು ನನ್ನ ಪರವಾಗಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಸೋಲಿಗೆ ಕೇರಳದಲ್ಲಿ ಭೈರವಿ ಯಾಗ ಮಾಡಿಸಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವ ಜೋಶಿ, ದೇವರು ಒಳ್ಳೆಯದನ್ನು ಮಾಡುತ್ತಾನೆ ಹೊರತು ಕೆಟ್ಟದನ್ನಲ್ಲ ಎಂದು ಕಾಂಗ್ರೆಸ್ ಗೆ ತಿರುಗೇಟು ನೀಡಿದರು.
ಯಾರೇ ಆಗಲಿ ತಾವು ಗೆಲ್ಲಬೇಕೆಂದು ಪೂಜೆ, ಪುನಸ್ಕಾರ ಮಾಡುತ್ತಾರೆ ಹೊರತು ಮತ್ತೊಬ್ಬರು ನಾಶವಾಗಲಿ ಎಂದಲ್ಲ. ದೇವರು ಕೆಡುಕು ಮಾಡುವುದಾದರೆ ಯಾರೂ ಪೂಜಿಸುವುದಿಲ್ಲ. ಕಾಂಗ್ರೆಸ್ಸಿಗರಿಗೆ ಆ ಭಯ ಏಕೆ? ಎಂದು ಪ್ರಶ್ನಿಸಿದರು.