ಜಮ್ಮು ಕಾಶ್ಮೀರ ಹೈಕೋರ್ಟ್​ಗೆ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ನೇಮಕ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹೈಕೋರ್ಟ್​ಗೆ ನ್ಯಾಯಮೂರ್ತಿ ಗೀತಾ ಮಿತ್ತಲ್​ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ಈ ಮೂಲಕ ಗೀತಾ ಮಿತ್ತಲ್​ ಅವರು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್​ಗೆ ನೇಮಕವಾದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಗೀತಾ ಮಿತ್ತಲ್​ ಅವರು ಪ್ರಸ್ತುತ ದೆಹಲಿ ಹೈಕೋರ್ಟ್​ನಲ್ಲಿ ನ್ಯಾಯಮೂರ್ತಿಯಾಗಿದ್ದು, ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದಿಂದ ಕಾನೂನು ಪದವರಿ ಪಡೆದಿರುವ ಗೀತಾ ಅವರು 1981ರಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. 2004ರ ಜುಲೈನಲ್ಲಿ ಅವರನ್ನು ದೆಹಲಿ ಹೈಕೋರ್ಟ್​ನ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿತ್ತು. ಇವರು 2018ನೇ ಸಾಲಿನಲ್ಲಿ ನಾರಿ ಶಕ್ತಿ ಪುರಸ್ಕಾರ ಪ್ರಶಸ್ತಿ ಪಡೆದಿದ್ದಾರೆ. (ಏಜೆನ್ಸೀಸ್​)