More

    ಬ್ಯಾಡಗಿಯಲ್ಲಿ ಬೆಳಗಾವಿ ವಿಭಾಗ ಮಟ್ಟದ ಕಬಡ್ಡಿ ಪಂದ್ಯಾವಳಿ ಅ. 9ರಿಂದ

    ಹಾವೇರಿ: ಬ್ಯಾಡಗಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಅ. 9ರಿಂದ ಮೂರು ದಿನಗಳ ಕಾಲ ಬೆಳಗಾವಿ ವಿಭಾಗಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕರ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾವಳಿ ಜರುಗಲಿದೆ ಎಂದು ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದರು.
    ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ರೀಡಾಕೂಟವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಯುವಸಬಲೀಕರಣ ಹಾಗೂ ಕ್ರೀಡಾ ಸಚಿವ ನಾಗೇಂದ್ರ ಪಂದ್ಯಾವಳಿ ಅಂಕಣದ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಶಿಕ್ಷಕ ಜಮೀರ ರಿತ್ತಿ ಬರೆದ ಕಬಡ್ಡಿ-ಮಿಂಚಿ ಮರೆಯಾದವರು ಎಂಬ ಸಂಶೋಧನಾ ಗ್ರಂಥ ಬಿಡುಗಡೆ ಮಾಡಲಿದ್ದಾರೆ ಎಂದರು.
    ಬೆಳಗಾವಿ ವಿಭಾಗದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಹಾವೇರಿ, ಉತ್ತರಕನ್ನಡ ಹಾಗೂ ಶಿರಸಿ ಮತ್ತು ಚಿಕ್ಕೋಡಿ(ಶೈಕ್ಷಣಿಕ ಜಿಲ್ಲೆಗಳು) ಸೇರಿ ಒಟ್ಟು 9ಜಿಲ್ಲೆಯ 14ರಿಂದ 17ವರ್ಷದ ಮಕ್ಕಳು ಪಾಲ್ಗೊಳ್ಳಲಿದ್ದಾರೆ. ಒಟ್ಟು 432 ಕ್ರೀಡಾಪಟುಗಳು, 100 ಜನ ತೀರ್ಪುಗಾರರು ಭಾಗವಹಿಸಲಿದ್ದಾರೆ ಎಂದರು.
    ವಿವಿಧ ಇಲಾಖೆಯ 250 ಜನರು ಕ್ರೀಡಾಕೂಟದ ಯಶಸ್ಸಿಗಾಗಿ ಕಾರ್ಯನಿರ್ವಹಿಸಲಿದ್ದಾರೆ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಹಾಗೂ ಕಿತ್ತೂರರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ವಸತಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
    ಅ. 9ರಂದು ವಿವಿಧ ಜಿಲ್ಲೆಗಳಿಂದ ಆಗಮಿಸುವ ಕ್ರೀಡಾಪಟುಗಳನ್ನು ಬ್ಯಾಟಗಿ ಪಟ್ಟಣದ ತಹಸೀಲ್ದಾರ ಕಚೇರಿಯಿಂದ ವಿವಿಧ ವಾದ್ಯ ಮೇಳಗಳೊಂದಿಗೆ ಅದ್ಧೂರಿಯಾಗಿ ಮೆರವಣಿಗೆ ಮೂಲಕ ತಾಲೂಕು ಕ್ರೀಡಾಂಗಣಕ್ಕೆ ಕರೆತರಲಾಗುವುದು. ಪಂದ್ಯಾವಳಿ ವೀಕ್ಷಣೆಗೆ 5 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
    ಪ್ರಮುಖರಾದ ಚನ್ನಬಸಪ್ಪ ಹುಲ್ಲತ್ತಿ, ಕುಮಾರಣ್ಣ ಚೂರಿ, ಹೊಳೆಪ್ಪ ಸೂರದ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts