ಉಜಿರೆ ಎಸ್‌ಡಿಎಂ ಚಾಂಪಿಯನ್ : ರಾಷ್ಟ್ರಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿರುವ ಕಬಡ್ಡಿ ತಂಡ

New Project (6)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಉಜಿರೆ ಎಸ್.ಡಿ.ಎಂ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದಿದೆ.

ತುಮಕೂರಿನ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಬ್ಬಡಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಶ್ರೇಷ್ಠ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ವಿಜಯಪುರ ಜಿಲ್ಲೆಯ ತಂಡವನ್ನು ಎದುರಿಸಿದ ಎಸ್‌ಡಿಎಂ ತಂಡ 38-26 ಅಂಕಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿತು.

ಎಸ್‌ಡಿಎಂ ಕಬಡ್ಡಿ ತಂಡದ ತರಬೇತುದಾರ ಕೃಷ್ಣಾನಂದ ರಾವ್, ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ ಪೂಂಜ ಉಪಸ್ಥಿತರಿದ್ದರು.

ವಿಜೇತ ತಂಡಕ್ಕೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್., ಐಟಿ ಮತ್ತು ಹಾಸ್ಟೆಲ್ ಆಡಳಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರನ್ ವರ್ಮ, ಎಸ್‌ಡಿಎಂ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪ್ರಮೋದ್ ಕುಮಾರ್, ಎಸ್‌ಡಿಎಂ ಕ್ರೀಡಾ ಸಂಘ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

ಗೃಹ ಸಚಿವರಿಂದ ಮೆಚ್ಚುಗೆ

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯದ ಗೃಹ ಸಚಿವ ಜಿ.ಪರಮೇಶ್ವರ ಅವರು ಎಸ್‌ಡಿಎಂ ತಂಡಕ್ಕೆ ಪ್ರಶಸ್ತಿ ಪ್ರದಾನ ಮಾಡಿದರು. ಬಳಿಕ ಮಾತನಾಡಿ, ಕ್ರೀಡಾ ಕ್ಷೇತ್ರಕ್ಕೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳು ನಿರಂತರವಾಗಿ ನೀಡುತ್ತಿರುವ ಮಹತ್ವದ ಕೊಡುಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಷ್ಟ್ರಮಟ್ಟಕ್ಕೆ ಆಯ್ಕೆ

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದ ಎಸ್‌ಡಿಎಂ ತಂಡ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದೆ. 2025-26ನೇ ಸಾಲಿನ ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದೆ.

ಪ್ರತಿ ಪಂದ್ಯವೂ ಸವಾಲಿನದ್ದಾಗಿತ್ತು. ಚಾಂಪಿಯನ್ ಪಟ್ಟ ಗಳಿಸಲು ನಮ್ಮ ತಂಡದ ನಿರಂತರ ಪ್ರಯತ್ನ, ತರಬೇತುದಾರರ ಪ್ರತಿನಿತ್ಯದ ತರಬೇತಿ ಮತ್ತು ಎಸ್‌ಡಿಎಂ ಶಿಕ್ಷಣ ಸಂಸ್ಥೆ ಕ್ರೀಡಾ ಕ್ಷೇತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹದಿಂದ ಸಾಧ್ಯವಾಗಿದೆ. ರಾಜ್ಯಮಟ್ಟದ ಚಾಂಪಿಯನ್‌ಗಳಾಗಿರುವ ಜತೆಗೆ ಮುಂಬರುವ ರಾಷ್ಟ್ರಮಟ್ಟದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವುದು ನಮ್ಮ ಗುರಿ. ಆಶಿಶ್, ಚಾಂಪಿಯನ್ ತಂಡದ ನಾಯಕ, ಎಸ್‌ಡಿಎಂ ಪದವಿಪೂರ್ವ ಕಾಲೇಜು, ಉಜಿರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net