More

    ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ

    ಮೈಸೂರು: ಕಾವೇರಿ ಮತ್ತು ಕಬಿನಿ ಅಚ್ಚುಕಟ್ಟು ಭಾಗದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.
    ನಗರದ ಕಾಡಾ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ನಾನಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.
    ಕಾವೇರಿ ಮತ್ತು ಕಬಿನಿ ಅಚ್ಚುಕಟ್ಟು ಭಾಗದ ನಾಲೆಗಳಿಗೆ ನೀರು ಹರಿಸುವ ಮೂಲಕ ಕೆರೆಕಟ್ಟೆ ತುಂಬಿಸಿ, ಜನ ಜಾನುವಾರುಗಳಿಗೆ ಕುಡಿಯಲು ನೀರು ನೀಡಿ ಅನುಕೂಲ ಕಲ್ಪಿಸಬೇಕು. ಬೇಸಿಗೆ ಬೆಳೆ ಬೆಳೆಯಲು ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ಕಾಡಾ ಕಚೇರಿಗೆ ಮನವಿ ಸಲ್ಲಿಸಿದರು.
    ಕಬಿನಿ, ಕೆಆರ್‌ಎಸ್ ಜಲಾಶಯಗಳಲ್ಲಿ ಸಾಕಷ್ಟು ನೀರಿದ್ದು, ನೀರಿನ ಸದ್ಬಳಕೆಗೆ ಚಿಂತನೆ ನಡೆಸಬೇಕು. ಕಾವೇರಿ ಕಬಿನಿ ಅಚ್ಚುಕಟ್ಟು ಭಾಗದ ರೈತರು ಕಳೆದ ಸಾಲಿನಲ್ಲಿ ಅತಿ ಮಳೆಯಾದ ಪರಿಣಾಮ ಉತ್ತಮ ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ. ಇದರಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕಬಿನಿ ಜಲಾಶಯದಿಂದ ಎಡದಂಡೆ ಮತ್ತು ಬಲದಂಡೆ, ರಾಂಪುರ, ಹುಲ್ಲಹಳ್ಳಿ ನಾಲೆಗಳಿಗೆ, ಕೆಆರ್‌ಎಸ್ ಜಲಾಶಯದ ರಾಮಸ್ವಾಮಿ, ಸಿಡಿಎಸ್, ರಾಜಪರಮೇಶ್ವರಿ, ವಿರಿಜಾ, ವಿಸಿ ನಾಲೆ, ವರುಣ ನಾಲೆ ಮತ್ತಿತರ ನಾಲೆಗಳಿಗೆ ಕೂಡಲೇ ನೀರು ಹರಿಸಲು ಕ್ರಮ ಕೈಗೊಳ್ಳಬೇಕು.
    ಕಾವೇರಿ ನ್ಯಾಯ ಮಂಡಳಿ ತೀರ್ಪಿನ ಆದೇಶಕ್ಕಿಂತಲೂ ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಈಗಾಗಲೇ ಹರಿಸಲಾಗಿದೆ. ಜಲಾಶಯದಲ್ಲಿ ಸಂಗ್ರಹವಿರುವ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಈ ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಬೇಕು. ನಿರ್ಲಕ್ಷ್ಯ ಮಾಡಿದರೆ ನೀರಿಗಾಗಿ ನಿರಂತರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
    ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಮುಖಂಡರಾದ ಅತ್ತಹಳ್ಳಿ ದೇವರಾಜ್, ಕೃಷ್ಣೇಗೌಡ, ಪರಶಿವಮೂರ್ತಿ, ಸಿದ್ದೇಶ್, ಮಹದೇವಸ್ವಾಮಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts