ಜಾಲತಾಣದಲ್ಲಿ ತಪ್ಪು ಸಂದೇಶ ಪ್ರಚಾರ ಆರೋಪ: ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್​ ಬಂಧನ

Manikanth
Published on

ಕಲಬುರಗಿ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ ಪ್ರಚಾರ ಮಾಡಿದ ಆರೋಪದ ಮೇಲೆ ಚಿತ್ತಾಪುರ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್​ನನ್ನು ಕಲಬುರಗಿಯ ಮಾಡಬೂಳ್​ ಠಾಣಾ ಪೊಲೀಸರು ಇಂದು (ಆ.23) ಬಂಧಿಸಿದ್ದಾರೆ.

ಮಣಿಕಂಠ ರಾಠೋಡ್, ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಿಂದ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿ ಸೋತಿದ್ದಾರೆ. ಇಂದು ಮುಂಜಾನೆ ಕಲಬುರಗಿ ನಗರದ ಅಪಾರ್ಟ್ಮೆಂಟ್​ನಿಂದ ಬಂಧಿಸಿ ರಾಠೋಡ್​ರನ್ನು ಕರೆದುಕೊಂಡು ಹೋಗಿದ್ದಾರೆ.

ಮಣಿಕಂಠ ರಾಠೋಡ್ ವಿರುದ್ಧ, ಚಿತ್ತಾಪುರ ತಾಲೂಕಿನ ಮಾಡಬೂಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ತಪ್ಪು ಸಂದೇಶ ಪ್ರಚಾರ ಮಾಡಿದ ಆರೋಪದ ಮೇಲೆ ಐಪಿಸಿ ಸೆಕ್ಷನ್ 153 ಎ, 505(1)ಬಿ ಅಡಿ ಕೇಸ್ ದಾಖಲಾಗಿತ್ತು.

ಚಿತ್ತಾಪುರ ತಾಲೂಕಿನ ಕಲಗುರ್ತಿ ಗ್ರಾಮದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡು ತಿಂಗಳಾಗಿದೆ. ಈ ಪ್ರಕರಣದ ಆರೋಪಿಗಳು ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರು ಮತ್ತು ಆರೋಪಿಗಳನ್ನು ಪೊಲೀಸರು ಬಂಧಿಸುತ್ತಿಲ್ಲ. ಪೊಲೀಸರು ಸಚಿವ ಪ್ರಿಯಾಂಕ್ ಖರ್ಗೆ ಕೈಗೊಂಬೆಯಾಗಿದ್ದಾರೆ ಅಂತ ರಾಠೋಡ್​ ಆರೋಪಿಸಿದ್ದಾರೆ.

ಈ ಬಗ್ಗೆ ಇಂದು ಚಿತ್ತಾಪುರ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಜನರಿಗೆ ತಪ್ಪು ಸಂದೇಶ ರವಾನೆ ಮಾಡುತ್ತಿದ್ದಾರೆ ‌ಅಂತ ಆರೋಪಿಸಿ ಮಣಿಕಂಠ ರಾಠೋಡ್​ನನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net