

Karnataka Budget: ಇಂದಿನ ರಾಜ್ಯ ಬಜೆಟ್ನಲ್ಲಿ ಮೀನುಗಾರಿಕೆ ವಿಭಾಗಕ್ಕೂ ಸಹಾಯಧನ ಘೋಷಿಸಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜಿಗೆ ಪ್ರಸ್ತುತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲವನ್ನು ದ್ವಿಗುಣಗೊಳಿಸಲಾಗುವುದು ಮತ್ತು ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲು 30 ಕೋಟಿ ರೂ. ಒದಗಿಸಲಾಗುವುದು ಎಂದರು.
ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು. ರಾಜ್ಯದಲ್ಲಿ ನೋಂದಣಿಯಾಗಿರುವ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್‌ಗಳನ್ನು ಬದಲಾಯಿಸಿ, ಹೊಸ ಇಂಜಿನ್ ಖರೀದಿಸಲು ಶೇ.50ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ ನೀಡಲಾಗುವುದು ಎಂಬ ಸಿಹಿ ಸುದ್ದಿ ನೀಡಿದರು.
ಪ್ರವಾಸಿಗರಿಗೆ ಶುಚಿ-ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈ-ಟೆಕ್ ಮತ್ಸ್ಯದರ್ಶಿನಿಯನ್ನು ಪ್ರಾರಂಭಿಸಲಾಗುವುದು ಹಾಗೂ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಹನ ದಟ್ಟಣೆಯನ್ನು ನಿರ್ವಹಿಸಲು “ಮಲ್ಟಿ-ಲೆವೆಲ್ ಪಾರ್ಕಿಂಗ್” ವ್ಯವಸ್ಥೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು. ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರಸ್ತುತವಿರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.