ರಾಜ್ಯದಲ್ಲಿ NEP ರದ್ದು! 9ನೇ 10ನೇ ತರಗತಿ ವಿದ್ಯಾರ್ಥಿಗಳಿಗೂ ವಾರದಲ್ಲಿ ಎರಡು ದಿನ ಮೊಟ್ಟೆ/ಬಾಳೆಹಣ್ಣು/ಶೇಂಗಾ ಚಿಕ್ಕಿ ವಿತರಣೆ…

NEP
Published on

ಬೆಂಗಳೂರು: ರಾಜ್ಯದ ಅಸ್ಮಿತೆಯನ್ನು ಎತ್ತಿಹಿಡಿಯುವ ಹೊಸ ಶಿಕ್ಷಣ ನೀತಿಯನ್ನು ರೂಪಿಸುವ ಬಗ್ಗೆ ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಒಟ್ಟು 37,587 ಕೋಟಿ ರೂ. ಹಣವನ್ನು ಮೀಸಲು ಇರಿಸಲಾಗಿದೆ. 

NEP ರದ್ದು!

ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನುಒಳಗೊಂಡಿದೆ ಎಂದು ರಾಜ್ಯ ಬಜೆಟ್​ನಲ್ಲಿ ಉಲ್ಲೇಖಿಸಲಾಗಿದ್ದು ರಾಜ್ಯದ ಅಸ್ಮಿತೆ ಎತ್ತಿ ಹಿಡಿಯುವ ಹೊಸ ಶಿಕ್ಷಣ ನೀತಿ ರೂಪಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಬಜೆಟ್​ನಲ್ಲಿ "ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ. ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣ ನೀಡಿ ಯುವಜನರನ್ನ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ನಿಟ್ಟಿನಲ್ಲಿ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶ ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು" ಎಂದು ಉಲ್ಲೇಖಿಸಲಾಗಿದೆ.

ಶಿಕ್ಷಣಕ್ಕೆ ಸಂಬಂಧಪಟ್ಟ ಹೊಸ ಕಲ್ಪನೆಗಳನ್ನು ವಾಸ್ತವಕ್ಕೆ ತರಲು ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಮಾಧ್ಯಮಿಕ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಇನ್ನೋವೇಶನ್ ಲ್ಯಾಬ್‌ಗಳನ್ನು ಸ್ಥಾಪಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. 2023-24ನೇ ಸಾಲಿನಲ್ಲಿ ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ ನಾಲ್ಕು ಪ್ರಯೋಗಾಲಯಗಳನ್ನು ಎರಡುಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ.

ಸಸ್ಯ ಶ್ಯಾಮಲ!

ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಸ್ಥಳಾವಕಾಶ ಉಳ್ಳ ಶಾಲೆಗಳ ಸುತ್ತಮುತ್ತ ಒಂದು ಕಾಲಾವಧಿಯಲ್ಲಿ 50 ಲಕ್ಷ ಸಸಿಗಳನ್ನು ನೆಡುವ `ಸಸ್ಯ ಶ್ಯಾಮಲ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎನ್ನಲಾಗಿದೆ.

ನಿರ್ವಹಣೆಗೆ ಮೀಸಲಾದ ಅನುದಾನ ಹೆಚ್ಚಳ!

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಾಗಿ ನೀಡುತ್ತಿರುವ ಅನುದಾನವನ್ನು ಕನಿಷ್ಠ 20,000 ರೂ ದಿಂದ ; 45,000 ರೂ. ಗಳವರೆಗೆ ಹೆಚ್ಚಿಸಿ 47,272 ಶಾಲೆಗಳು ಹಾಗೂ 1231 ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ ಒಟ್ಟಾರೆಯಾಗಿ 153 ಕೋಟಿ ರೂ. ಅನುದಾನ ಒದಗಿಸಲಾಗುವುದು.

ಮಕ್ಕಳಿಗೆ ವಾರದಲ್ಲಿ ಇನ್ನು ಎರಡು ದಿನ ಮೊಟ್ಟೆ/ಬಾಳೆಹಣ್ಣು/ಶೇಂಗಾಚಿಕ್ಕಿ!

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಾರಿ ಮೊಟ್ಟೆ/ ಶೇಂಗಾ ಚಿಕ್ಕಿ/ಬಾಳೆಹಣ್ಣನ್ನು ವಿತರಿಸಲಾಗುತ್ತಿದ್ದು, ಈಗ ವಾರದಲ್ಲಿ ಎರಡು ದಿವಸ ವಿತರಿಸಲಾಗುವುದು. ಪ್ರಸಕ್ತ ಸಾಲಿನಿಂದ ಈ ಯೋಜನೆಯನ್ನು 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಿ ಹೆಚ್ಚುವರಿ 280 ಕೋಟಿ ರೂ.ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಒದಗಿಸಲಾಗುವುದು.

ಕಲಿಕಾ ನ್ಯೂನತೆ ಹೋಗಲಾಡಿಸಲು ನೂತನ ಯೋಜನೆ

ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ನ್ಯೂನತೆಯನ್ನು ಹೋಗಲಾಡಿಸಲು ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಬಲವರ್ಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು 'ಮರುಸಿಂಚನ' ಎಂಬ ಹೊಸ ಯೋಜನೆಯಡಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಒಂದೂವರೆ ಲಕ್ಷ ವಿದ್ಯಾರ್ಥಿಗಳನ್ನು ಪ್ರೌಢ ಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ನೀಡಲಾಗುವುದು.

ನಿರ್ಮಾಣ ಕಾರ್ಯಗಳ ವಿವರ ಇಂತಿದೆ

ರಾಜ್ಯದ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉತ್ತಮ ಸೌಲಭ್ಯಗಳನ್ನು ನೀಡಲು ಶಾಲಾ ಕೊಠಡಿಗಳಿಗೆ 310 ಕೋಟಿ ರೂ.ಗಳು ಹಾಗೂ ಪದವಿ ಪೂರ್ವ ಕಾಲೇಜು ಕೊಠಡಿಗಳಿಗೆ 240 ಕೋಟಿ ರೂ. ಸೇರಿದಂತೆ ಒಟ್ಟು 550 ಕೋಟಿ ರೂ.ಗಳ ವೆಚ್ಚದಲ್ಲಿ 8,311 ಕೊಠಡಿಗಳ ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು.

ವಿದ್ಯಾರ್ಥಿಗಳ ಶಿಕ್ಷಣ ಮತ್ತು ಆರೋಗ್ಯದ ದೃಷ್ಟಿಯಿಂದ, ಮಕ್ಕಳ ಸಂಖ್ಯೆಗೆ ಅನುಗುಣವಾಗಿ, ಕಡಿಮೆ ಶೌಚಾಲಯಗಳಿರುವ 5,775 ಶಾಲೆಗಳಲ್ಲಿ ಹಾಗೂ 150 ಕಾಲೇಜುಗಳಲ್ಲಿ ಶೌಚಾಲಯ ಘಟಕಗಳನ್ನು ನರೇಗಾ ಯೋಜನೆಯ ಸಂಯೋಜನೆಯೊಂದಿಗೆ 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.

ಹಳೆಯ ಶಾಲಾ ಕಾಲೇಜು ಕಟ್ಟಡಗಳು ಹಾಗೂ ಮಳೆಯಿಂದಾಗಿ ಶಿಥಿಲಗೊಂಡಿರುವ 3,833 ಶಾಲೆಗಳು ಹಾಗೂ 724 ಪದವಿ ಪೂರ್ವ ಕಾಲೇಜು ಕೊಠಡಿಗಳನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ದುರಸ್ತಿಗೊಳಿಸುವ ಮೂಲಕ ಬಳಕೆಗೆ ಯೋಗ್ಯಗೊಳಿಸಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net