ಬೆಂಗಳೂರು: ವಿಧಾನಸಭಾ ಚುನಾವಣೆಯ ಮತಎಣಿಕೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಮುನ್ನಡೆ ಸಾಧಿಸಿದೆ. ಮುನ್ನಡೆಯಲ್ಲೇ ಕಾಂಗ್ರೆಸ್ ಮ್ಯಾಜಿಕ್ ನಂಬರ್ ದಾಟಿದೆ. ಫಲಿತಾಂಶ ಹೀಗೆ ಮುಂದುವರಿದರೆ ಕಾಂಗ್ರೆಸ್ ಈ ಬಾರಿ ಅಧಿಕಾರದ ಗದ್ದುಗೆ ಏರಲಿದೆ.
ಚುನಾವಣಾ ಫಲಿತಾಂಶದ ಸದ್ಯದ ಟ್ರೆಂಡ್ ಪ್ರಕಾರ ಕಾಂಗ್ರೆಸ್ 117 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಮ್ಯಾಜಿಕ್ ನಂಬರ್ ಅನ್ನು ದಾಟಿದೆ. ಉಳಿದಂತೆ ಬಿಜೆಪಿ 75 ಹಾಗೂ ಜೆಡಿಎಸ್ 23 ಮತ್ತು ಇತರೆ 2 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.
ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಇದೀಗ ಕಾಂಗ್ರೆಸ್ ಪಕ್ಷ 117 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಫಲಿತಾಂಶ ಹೀಗೆ ಮುಂದುವರಿದರೆ ಕಾಂಗ್ರೆಸ್ ಅಧಿಕಾರಕ್ಕೇರಲಿದೆ.
2018ರ ಫಲಿತಾಂಶ ಏನಿತ್ತು?
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್ 80 ಮತ್ತು ಜೆಡಿಎಸ್ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.
LIVE| ಕರ್ನಾಟಕ ಚುನಾವಣಾ ಫಲಿತಾಂಶ 2023: ಕ್ಷಣ ಕ್ಷಣದ ಮಾಹಿತಿಗಾಗಿ ನೇರಪ್ರಸಾರ ವೀಕ್ಷಿಸಿ