ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್​ ತಹಸೀಲ್ದಾರ್ ವಿಧಿವಶ | Manohar Tahsildar

Manohar Tahsildar
Published on

ಬೆಂಗಳೂರು: ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್​ ತಹಸೀಲ್ದಾರ್ ( Manohar Tahsildar ) ಅವರು ಇಂದು (ನ.21) ಕೊನೆಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಅನಾರೋಗ್ಯ ಹಿನ್ನೆಲೆಯಲ್ಲಿ ಮನೋಹರ್​ ಅವರು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಂಕರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ,​ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ನಾಲ್ಕು ಜನ ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನ ಬಿಟ್ಟು ಅಗಲಿದ್ದಾರೆ. ಇತ್ತೀಚಿಗೆ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮನೋಹರ್​ ಅವರ ಆರೋಗ್ಯ ವಿಚಾರಿಸಿದ್ದರು.

ಇಂದು ಮಧ್ಯಾಹ್ನ ಮೃತದೇಹವನ್ನು ಹಾನಗಲ್ ಎನ್‌ಸಿಜೆಸಿ ಮಹಾವಿದ್ಯಾಲಯ ಅವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಇದಾದ ಬಳಿಕ ಮನೋಹರ್​ ಅವರ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮನೋಹರ್​ ಅವರು ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದರು. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಜೆಡಿಎಸ್​ ಸೇರಿದ್ದರು. ಲೋಕಸಭಾ ಚುನಾವಣೆ ವೇಳೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು.

ಬಲಿಜ ಸಮುದಾಯಕ್ಕೆ ಸೇರಿದ್ದ ಮನೋಹರ್ ತಹಶೀಲ್ದಾರ್‌ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು ಹಿಂದೆ ಎಸ್‌.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ವಿಧಾನಸಭೆ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 1978ರಲ್ಲಿ ಮೊದಲ ಬಾರಿಗೆ ಹಾನಗಲ್ಲ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾದ ಮನೋಹರ್ ತಹಶೀಲ್ದಾರ್‌ ಅವರು 1989, 1999, 2013 ಸೇರಿ 4 ಬಾರಿ ಗೆಲುವು ಸಾಧಿಸಿದ್ದರು. ಈಗ ಮನೋಹರ ತಹಶೀಲ್ದಾರ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಮನೋಹರ್ ತಹಶೀಲ್ದಾರ ನಿಧನಕ್ಕೆ ಜಿಲ್ಲೆಯ ಮುಖಂಡರು ಹಾಗೂ ಅಭಿಮಾನಿ ಬಳಗ ಸಂತಾಪ ಸೂಚಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net