ಡಿ.22ಕ್ಕೆ ಸಂಪುಟ ವಿಸ್ತರಣೆ, ನಿಗಮ ಮಂಡಳಿಗೆ ನೇಮಕ: ಸಮನ್ವಯ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಇದೇ ತಿಂಗಳ 22 ರಂದು ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಅಂದೇ ನಿಗಮ ಮಂಡಳಿಗಳಿಗೂ ನೇಮಕ ಮಾಡಲಾಗುವುದು ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳಿಗೆ ನೇಮಕ, ಬೆಳಗಾವಿ ಅಧಿವೇಶನ ಮತ್ತು ಬಿಜೆಪಿಯ ಸಂಭವನೀಯ ಆಪರೇಷನ್​ ಕಮಲ ಈ ಎಲ್ಲ ಸಂಗತಿಗಳ ಹಿನ್ನೆಲೆಯಲ್ಲಿ ಇಂದು ರಾಜ್ಯ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ನಡೆಯಿತು.

ಬೆಂಗಳೂರಿನ ಕುಮಾರ ಕೃಪಾ ಗೆಸ್ಟ್​ ಹೌಸ್​ನಲ್ಲಿ ನಡೆದ ಈ ಸಭೆಯಲ್ಲಿ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ, ಸದಸ್ಯರೂ ಆಗಿರುವ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಪರಮೇಶ್ವರ್​, ರಾಜ್ಯ ಕಾಂಗ್ರೆಸ್​ ಉಸ್ತುವಾರಿ ವೇಣುಗೋಪಾಲ್​ ಮತ್ತು ಜೆಡಿಎಸ್​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್​ ಅಲಿ ಹಾಜರಾಗಿದ್ದರು.

ಸಭೆಯ ಬಳಿಕ ಮಾತನಾಡಿದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಡಿಸೆಂಬರ್ 22ರಂದು ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಆರು ಮಂದಿ ಕಾಂಗ್ರೆಸ್​ ಶಾಸಕರು, ಇಬ್ಬರು ಜೆಡಿಎಸ್​ ಶಾಸಕರು ಸಂಪುಟ ಸೇರಲಿದ್ದಾರೆ. ಅಂದೇ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರನ್ನೂ ನೇಮಿಸಲಾಗುತ್ತದೆ. ಜತೆಗೆ, ಸಂಸದೀಯ ಕಾರ್ಯದರ್ಶಿ ಹಾಗೂ ರಾಜಕೀಯ ಕಾರ್ಯದರ್ಶಿ ಹುದ್ದೆಗಳಿಗೂ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ಆಪರೇಷನ್​ ಕಮಲ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕಾಂಗ್ರೆಸ್​ ಮತ್ತು ಜೆಡಿಎಸ್​ನ ಯಾವ ಶಾಸಕರು ಬಿಜೆಪಿಯತ್ತ ಮುಖ ಮಾಡುವುದಿಲ್ಲ. ಬಿಜೆಪಿ ಆಪರೇಷನ್​ ಕಮಲ ಮಾಡಲು ಹೋಗಿ ವಿಫಲವಾಗಿದೆ. ರಾಜ್ಯದಲ್ಲಿ ಸರ್ಕಾರ ರಚಿಸುವ ಬಗ್ಗೆ ಬಿಜೆಪಿ ಹಗಲುಗನಸು ಕಾಣುತ್ತಿದೆ ಎಂದು ಟೀಕಿಸಿದರು.

ಭಿನ್ನಮತೀಯ ಚಟುವಟಿಕೆಯಲ್ಲಿ ತೊಡಗಿಡರುವ ಜಾರಕಿಹೊಳಿ ಸೋದರರ ಕುರಿತು ಮಾತನಾಡಿದ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ, ರಮೇಶ್​ ಜಾರಕಿಹೊಳಿ ಪಕ್ಷ ತೊರೆಯುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದರು.

ರಾಜ್ಯದಲ್ಲಿ ರಾಜಕೀಯ ಭೂಕಂಪನ ಸಂಭವಿಸಲಿದೆ ಎಂಬ ಕೇಂದ್ರ ಸಚಿವ ಪ್ರಕಾಶ್​ ಜಾವ್ಡೇಕರ್​ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, “ಯಾವ ದೇಶದಲ್ಲಿ ಭೂಕಂಪನವಾಗುತ್ತದೆಯಂತೆ? ಯಡಿಯೂರಪ್ಪ ಹೇಳಿದ್ದನ್ನು ಕೇಳಿಸಿಕೊಂಡು ಜಾವ್ಡೇಕರ್​ ಹೀಗೆ ಹೇಳಿದ್ದಾರೆ” ಎಂದು ವ್ಯಂಗ್ಯವಾಡಿದರು.

ಇನ್ನು ಪರಿಷತ್​ ಸಭಾಪತಿ ಸ್ಥಾನದ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ,”ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಸಿಎಂ ಕುಮಾರಸ್ವಾಮಿ ಮಾತನಾಡಿ, ಡಿಸೆಂಬರ್ 9ರಂದು ಸಚಿವ ಸಂಪುಟ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿತ್ತು. ಆದರೆ, 10 ರಿಂದ ಬೆಳಗಾವಿ ಅಧಿವೇಶನ ಆರಂಭವಾಗುತ್ತಿದೆ. ಹೀಗಾಗಿ ಅಧಿವೇಶನ ನಡೆಯುವ ಸಂದರ್ಭದಲ್ಲೇ ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ ಮಾಡಲಿದ್ದೇವೆ. ಇದಕ್ಕೆ ರಾಹುಲ್ ಗಾಂಧಿ ಒಪ್ಪಿಗೆ ನೀಡಿದ್ದಾರೆ‌. ಅಂದೇ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಮಾಡಲಾಗುವುದು ಎಂದು ತಿಳಿಸಿದರು.