

ಹೈದರಾಬಾದ್: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಭಾರತ ರಾಷ್ಟ್ರ ಸಮಿತಿ ಪಕ್ಷದಲ್ಲಿ ತುಸು ಹೆಚ್ಚು ಎಂದು ಹೇಳಬಹುದು.
ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಭಾರತ ರಾಷ್ಟ್ರ ಸಮಿತಿ ಪಕ್ಷ ಮಂಗಳವಾರ ತೆಲಂಗಾಣದ 115 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ನವದೆಹಲಿಯಲ್ಲಿರುವ ತೆಲಂಗಾಣ ಭವನದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಸಿಎಂ ಕೆಸಿಆರ್ ಬಿಡುಗಡೆ ಮಾಡಿದ್ದಾರೆ.
ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಸಿಎಂ ಕೆಸಿಆರ್ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು 119ರ ಪೈಕಿ 95-105 ಸ್ಥಾನಗಳನ್ನು ಗೆಲ್ಲುತ್ತದೆ. ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸಲಾಗಿದ್ದು, ಸ್ಥಳೀಯ ಮುಖಂಡರ ಅಭಿಪ್ರಾಯಕ್ಕೆ ಹೆಚ್ಚಿನ ಮಣೆ ಹಾಕಲಾಗಿದೆ. ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷದ ಜೊತೆಗಿನ ನಮ್ಮ ಸಂಬಂಧ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಕೆಸಿಆರ್ ಗಜ್ವೇಲ್ ಮತ್ತು ಕಾಮರೆಡ್ಡಿ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದು, ಅವರ ಪುತ್ರ ಸಚಿವ ಕೆಟಿಆರ್ ಸಿರ್ಸಿಲಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಕಮ್ಮಂ ಜಿಲ್ಲೆಯ ವೈರಾ ವಿಧಾನಸಭಾ ಕ್ಷೇತ್ರದಿಂದ ಬಾನೋತ್ ಮದನ್ಲಾಲ್ ಅವರಿಗೆ ಟಿಕೆಟ್ ನೀಡಲಾಗಿದೆ. ಇತ್ತೀಚಿಗೆ ಅವರು ಮಹಿಳೆಯೊಂದಿಗಿರುವ ಖಾಸಗಿ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.